ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್….
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು
ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ ಸೆಪ್ಟೆಂಬರ್ 22 :-
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025 ಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಇಂದು ದೇವನಹಳ್ಳಿ ಟೌನ್ ನ 16 ನೇ ವಾರ್ಡ್ ನಲ್ಲಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಆಯೋಗವು ಸಮೀಕ್ಷಾ ಕಾರ್ಯವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ಸಮೀಕ್ಷೆಗಾಗಿ 3286 ಗಣತೀದಾರರನ್ನು 194 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು ಸಮೀಕ್ಷೆ ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಆಧಾರ್ ಕಾರ್ಡ್ ಕಡ್ಡಾಯ
ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸಾರ್ವಜನಿಕರು ಆಧಾರ್ ಕಾರ್ಡ್ ಇ-ಕೈವೈಸಿ ಕಡ್ಡಾಯವಾಗಿ ಮಾಡಿರಬೇಕು, ಇ-ಕೆವೈಸಿ ಮಾಡಿರುವ ಆಧಾರ್ ಕಾರ್ಡ್ ನ ಮೊಬೈಲ್ ನಂಬರ್ ಗೆ ಒಟಿಪಿ ಬರುತ್ತದೆ. ಇ-ಕೆವೈಸಿ ಮಾಡಿಸದವರು ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ ಇ- ಕೆವೈಸಿ ಮಾಡಿಸಿ. ಇದರಿಂದ ಸಮೀಕ್ಷೆಗೆ ದತ್ತಾಂಶ ಸಂಗ್ರಹಿಸಲು ಅನುಕೂಲವಾಗಲಿದೆ ಎಂದರು. ಗಣತೀದಾರರು ಕೇಳುವಂತಹ ಪ್ರಶ್ನೆಗಳಿಗೆ ಸಾರ್ವಜನಿಕರು ಸರಿಯಾಗಿ ಸಮರ್ಪಕ ಉತ್ತರ ನೀಡಿ ಸಮೀಕ್ಷೆ ಯಶಸ್ಸಿಗೆ ಸಹಕರಿಸಬೇಕು ಎಂದರು.
ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ ಅಗತ್ಯತೆಗಳು ಮತ್ತು ಇತರೆ ಸಾಮಾಜಿಕ ಅಂಶಗಳನ್ನು ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಸೃಷ್ಟಿಸುವುದು. ಈ ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಸಹಾಯವಾಣಿ ಸಂಪರ್ಕಿಸಿ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 05 (Help Line) ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿರುತ್ತವೆ. ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿ ದೂರವಾಣಿ ಸಂಖ್ಯೆ 080-22449999,
ದೇವನಹಳ್ಳಿ-9036858653, ದೊಡ್ಡಬಳ್ಳಾಪುರ-8884579990, ಹೊಸಕೋಟೆ-080-27931104, ನೆಲಮಂಗಲ-9740100884. ಸಮೀಕ್ಷೆಯ ಕುರಿತು ಏನಾದರೂ ಸಂದೇಹಗಳಿದ್ದಲ್ಲಿ ಸಹಾಯವಾಣಿಯನ್ನು ಬೆಳಿಗ್ಗೆ 7.00 ರಿಂದ ಸಂಜೆ 7.00 ರವರೆಗೆ ಸಂಪರ್ಕಿಸಿ.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಉಪಾಧ್ಯಕ್ಷ ರವೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜನಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಲಕ್ಷ್ಮಿಕಾಂತ್, ತಹಶೀಲ್ದಾರ್ ಅನಿಲ್ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
₹₹₹₹₹₹₹₹₹₹₹₹₹&&&&&&&&₹₹₹₹₹₹₹₹₹₹₹₹₹
ಮಕ್ಕಳ ಸಹಾಯವಾಣಿ ಸಂಖ್ಯೆ 1098
ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಬರೆಯಲು ಮುಖ್ಯ ಕಾರ್ಯದರ್ಶಿಗಳ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 20 :
ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.
ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ.
ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಶಾಶ್ವತ ಫಲಕದಲ್ಲಿ ಪ್ರದರ್ಶಿಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.
ಈಗಾಗಲೇ ಕೆಲವು ಇಲಾಖೆಗಳು ಈ ಕುರಿತು ಕ್ರಮವಹಿಸಿವೆ. ಕೆಲವು ಇಲಾಖೆಗಳಲ್ಲಿ ಈ ಬಗ್ಗೆ ನಿರ್ದೇಶನವಿಲ್ಲ ಎಂಬ ಗೊಂದಲಗಳಿಂದ ಶಾಶ್ವತ ಫಲಕಗಳಲ್ಲಿ ಪ್ರದರ್ಶಿಸದೇ ಇರುವುದು ತಿಳಿದು ಬಂದಿದ್ದು, ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಶಾಶ್ವತ ಫಲಕದಲ್ಲಿ ಪ್ರದರ್ಶಿಸದೆ ಇರುವ ಇಲಾಖೆಗಳು ಯಾವುದೇ ಗೊಂದಲಗಳಿಗೆ ಆಸ್ಪದ ಕೊಡದೇ ತಕ್ಷಣ ಕ್ರಮಕೈಗೊಂಡು ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ತಮ್ಮ ಇಲಾಖೆಯ ಶಾಶ್ವತ ಫಲಕದಲ್ಲಿ ಪ್ರದರ್ಶಿಸುವಂತೆ ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.