--Ads--

ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ: ಸಚಿವ ಕೆ.ಹೆಚ್ ಮುನಿಯಪ್ಪ

On: November 30, 2025 8:49 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ: ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.29:

ಮಕ್ಕಳಿಗೆ ವಿದ್ಯಾಭ್ಯಾಸ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಡುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುವ ಜೊತೆಗೆ ಮಕ್ಕಳ ಪ್ರತಿಭೆ ಗುರುತಿಸಲು ಉತ್ತಮ ಅವಕಾಶ ಸಿಕ್ಕಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ/ಕಲೋತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರವು ಶಾಲೆಗಳಲ್ಲಿ ಪ್ರತಿಭಾ ಕಾರಂಜಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಉತ್ತಮ ಕೆಲಸ ಮಾಡುತ್ತಿದೆ. ವಿದ್ಯಾಬ್ಯಾಸ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಭಾಷಣ ಸ್ಪರ್ಧೆ, ರಸಪ್ರಶ್ನೆ, ಜಾನಪದ ಗೀತೆ, ಭಾವಗೀತೆ, ಭರತನಾಟ್ಯ, ಏಕಪಾತ್ರಾಭಿನಯ, ನಾಟಕ ಮುಂತಾದ ಕಲೆ, ಪ್ರತಿಭೆಯನ್ನು ಮಕ್ಕಳು ತೋರಿಸಲು ಉತ್ತಮ ವೇದಿಕೆಯಾಗಿದೆ ಎಂದರು.

ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಆಯ್ಕೆ ಆಗಬೇಕು. ಜಿಲ್ಲೆಗೆ, ರಾಜ್ಯಕ್ಕೆ ಒಳ್ಳೆಯ ಹೆಸರು ತಂದು ಕೊಡಬೇಕು ಎಂದು ಹೇಳಿದರು.

ಮಕ್ಕಳನ್ನು ಪೋಷಿಸಿ ಬೆಳೆಸುವುದರಲ್ಲಿ ಪೋಷಕರ ಪಾತ್ರ ಎಷ್ಟು ಮುಖ್ಯವೋ ಹಾಗೆಯೇ ಶಿಕ್ಷಕರ ಪಾತ್ರ ಅಷ್ಟೇ ಮುಖ್ಯ. ವಿದ್ಯಾಬ್ಯಾಸ ಜೊತೆಗೆ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು. ಉತ್ತಮ ವ್ಯಕ್ತಿತ್ವ‌ ರೂಪಿಸಿಕೊಳ್ಳುವುದು, ಭವ್ಯ ಭಾರತ ನಿರ್ಮಾಣಕ್ಕೆ ಮಕ್ಕಳನ್ನು ಬೆಳೆಸುವುದು ಪೋಷಕರ, ಶಿಕ್ಷಕರ ಮೇಲಿದೆ ಎಂದರು.

ಮಾದರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕ್ರಮ
ಈಗಿನ ಸರ್ಕಾರಿ ಪ್ರೌಢಶಾಲೆಯು ಸುಮಾರು 75 ವರ್ಷದ ಹಳೆಯ ಕಟ್ಟಡವಾಗಿದೆ. ಇನ್ಫೋಸಿಸ್ ಸಂಸ್ಥೆಯು ಸಿಎಸ್ಆರ್ ಅನುದಾನದಡಿ 25 ಕೊಠಡಿ ನಿರ್ಮಿಸಲು ಉದ್ದೇಶಿಸಿದ್ದಾರೆ. ಸರ್ಕಾರಿ ಹಾಗೂ ಸಿಎಸ್ಆರ್ ಅನುದಾನದಡಿ ಸುಸಜ್ಜಿತ ಮಾದರಿ ಸರ್ಕಾರಿ ಶಾಲೆ ನಿರ್ಮಿಸಲಾಗುವುದು. ಅಧಿಕಾರಿಗಳು ಮಾದರಿ ಕಟ್ಟಡದ ರೂಪುರೇಷೆ ಸಿದ್ದಪಡಿಸಿ ವರದಿ ನೀಡಿ ಆದಷ್ಟು ಬೇಗ ಕೆಲಸ ಶುರು ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ, , ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಜಿ. ಪಂ. ಮಾಜಿ ಸದಸ್ಯ ಮಂಜುನಾಥ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜಿನಪ್ಪ, ತಹಶೀಲ್ದಾರ್ ಅನಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

&&&&&&&&&&&&&&&&&&&&&&&&&

ಜಿಲ್ಲಾ ಮಟ್ಟದ ವಿವಿಧ ಕಲಾ ಪ್ರತಿಭೋತ್ಸವ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 29:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಕಲಾ ಸ್ಪರ್ಧೆಗಳಿಗೆ ಕಲಾ ನೈಪುಣ್ಯವನ್ನು ವೃದ್ಧಿಸಿಕೊಳ್ಳಲು ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಮತ್ತು ಯುವ ಪ್ರತಿಭೆಗೆ ಜಿಲ್ಲೆಯಲ್ಲಿನ ಮಕ್ಕಳು ಹಾಗೂ ಯುವಕರು ತಮ್ಮ ಸ್ವ-ವಿವರದ ಜೊತೆಗೆ ಅಗತ್ಯ ದಾಖಾಲೆಯೊಂದಿಗೆ ಡಿಸೆಂಬರ್ 09 ರೊಳಗೆ ನೋಂದಾಯಿಸಿಕೊಳ್ಳಿ.

ಜಿಲ್ಲಾ ಮಟ್ಟದ ವಿವಿಧ ಕಲಾ ಸ್ಪರ್ಧೆಯನ್ನು ಡಿಸೆಂಬರ್ 10 ರಂದು ದೇವನಹಳ್ಳಿಯ ಅಂಜನಾದ್ರಿ ಪದವಿ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ವಲಯ ಮಟ್ಟದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ವಿಜೇತರಾದವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುತ್ತಾರೆ.

ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಬಾಲ ಪ್ರತಿಭೆಗೆ ಕನಿಷ್ಠ 8 ವರ್ಷದಿಂದ 14 ವರ್ಷಕ್ಕಿಂತ ಕಡಿಮೆಯಿರಬೇಕು. ಕಿಶೋರ ಪ್ರತಿಭೆಗೆ ಕನಿಷ್ಠ 14 ವರ್ಷದಿಂದ 18 ವರ್ಷ ದೊಳಗಿನವರಾಗಿರಬೇಕು. ಯುವ ಪ್ರತಿಭೆಗೆ ಕನಿಷ್ಠ 18 ವರ್ಷದಿಂದ 30 ವರ್ಷಕ್ಕಿಂತ ಕಡಿಮೆಯಿರಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಶಾಲೆಯಿಂದ ವಯೋಮಿತಿ ದೃಢೀಕರಣ ಪತ್ರವನ್ನು ಸಲ್ಲಿಸಬೇಕು. ಇಲ್ಲವಾದಲ್ಲಿ ಪಂಚಾಯ್ತಿ / ನಗರಸಭೆ / ಪುರಸಭೆ / ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರವನ್ನು ಪಡೆದು ಸಲ್ಲಿಸಬೇಕು.

ಬಾಲ / ಕಿಶೋರ ವಿಭಾಗದ ಪ್ರತಿಭೆಗಳಿಗೆ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಚಿತ್ರಕಲೆ, ಜಾನಪದ ಸಂಗೀತ, ಹಿಂದೂಸ್ತಾನಿ / ಕರ್ನಾಟಕ ಶಾಸ್ತ್ರೀಯ ಸಂಗೀತ. ಯುವ ಪ್ರತಿಭೆಗಳಿಗೆ ನನ್ನ ಮೆಚ್ಚಿನ ಸಾಹಿತಿ (ಆಶು ಭಾಷಣ), ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಚಿತ್ರಕಲೆ, ಹಿಂದೂಸ್ತಾನಿ / ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ / ಕರ್ನಾಟಕ ವಾದ್ಯ ಸಂಗೀತಗಳು ಏಕ ವ್ಯಕ್ತಿ ಪ್ರತಿಭೆಗಳು. ನಾಟಕವು ಸಮೂಹ ಸ್ಪರ್ಧೆಗಳಲ್ಲಿನ ವಿಭಾಗವಾಗಿದ್ದು, ಆಯಾ ಸ್ಪರ್ಧೆಗೆ ನಿರ್ದಿಷ್ಟ ಸಮಯವನ್ನು ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, 1ನೇ ಮಹಡಿ, ನಂ.118 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನ ಇಲ್ಲಿಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ ರವಿಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now