ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ: ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ 

ವಿಜಯ ದರ್ಪಣ ನ್ಯೂಸ್….

ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ: ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ

ಶಿಡ್ಲಘಟ್ಟ : ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ. ಮತದಾನ ಎಲ್ಲರಿಗೂ ದನಿ ನೀಡುವ ಅಸ್ತ್ರವಾಗಿದ್ದು ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸುಭದ್ರ ದೇಶ ಕಟ್ಟುವ ಕೆಲಸಕ್ಕೆ ಕೈ ಜೋಡಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನನ್ನ ಭಾರತ, ನನ್ನ ಮತ ಎಂಬ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಿದ್ದ 16 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಮ್ಮನ್ನು ಯಾರು ಮುನ್ನಡೆಸಬೇಕು, ಅವರಲ್ಲಿ ಯಾವ ಸದ್ಗುಣಗಳು ಇರಬೇಕು ಎಂಬ ಚಿಂತನೆ ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಯೇ ಮತದಾನ ದಾನಗಳಲ್ಲಿ, ಮತದಾನ ಶ್ರೇಷ್ಠ ದಾನವಾಗಿದ್ದು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯವಾಗಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವದ ಸುಭದ್ರತೆಗೆ 18 ವರ್ಷ ತುಂಬಿದ ದೇಶದ ಪ್ರತಿಯೊಬ್ಬ ಪ್ರಜೆಯೂ ಮತದಾನ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.

ಜಂಟಿ ಕೃಷಿ ನಿರ್ದೇಶಕ ಹಾಗೂ ಮತದಾರ ನೋಂದಣಾಧಿಕಾರಿ ಎಸ್.ಎಸ್.ಅಬಿದ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು, ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಮೂಲಕ ದೇಶದ ಘನತೆ ಮತ್ತು ಗೌರವವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪ್ರತಿ ವರ್ಷ ಜ. 25 ರಂದು ಮತದಾರರ ದಿನಾಚರಣೆ ಆಚರಿಸಲಾಗುತ್ತಿದೆ, ಮತದಾರರ ದಿನಾಚರಣೆ ಆಚರಣೆಗೆ ನಿಜವಾಗಿಯೂ ಅರ್ಥ ಬರಬೇಕಾದರೆ ಪ್ರತಿಯೊಬ್ಬರೂ ಸಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವ ಜೊತೆಗೆ ಅರ್ಹರಿಗೆ ಮತ ಚಲಾಯಿಸಬೇಕು ಎಂದರು.

ತಹಶೀಲ್ದಾರ್ ಎನ್.ಗಗನಸಿಂಧೂ ಮಾತನಾಡಿ, ಶ್ರೇಷ್ಠ ವ್ಯಕ್ತಿಗೆ ಮತದಾನ ಮಾಡುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ,ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ಸರ್ಕಾರ ಆಯ್ಕೆ ಮಾಡುವ ಹಾಗೂ ಸರ್ಕಾರವನ್ನು ಪ್ರಶ್ನಿಸುವ ಹಕ್ಕಿದೆ ಎಂದರು.

ಈ ವೇಳೆ ಮತದಾರರ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ. ಸಿ.ಎಸ್, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್, ನಗರಸಭೆ ಪೌರಾಯುಕ್ತೆ ಜಿ.ಅಮೃತಗೌಡ, ನಗರ ಠಾಣೆ ಪಿಎಸ್ಸೈ ವೇಣುಗೋಪಾಲ್ ಹಾಗು ವಿವಿಧ ಇಲಾಖೆಗಳ ಅಧಿಕಾರಿಗಳು, ಹಾಜರಿದ್ದರು.