ವಿಜಯ ದರ್ಪಣ ನ್ಯೂಸ್….
ಬೀದಿ ಬದಿ ವ್ಯಾಪಾರಿಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ :ಎಸ್.ಆರ್. ಶ್ರೀನಿವಾಸ್

ತಾಂಡವಪುರ ಜೂನ್ 10 ಸಾಂಸ್ಕೃತಿಕ ನಗರ ಮೈಸೂರಿನ ಚಿಕ್ಕಗಡಿಯಾರದ ಬಳಿ ಇಂದು ರಸ್ತೆ ಬದಿ ಬದಿ ವ್ಯಾಪಾರಿಗಳೊಂದಿಗೆ ಕರ್ನಾಟಕ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀನಿವಾಸ್ ಅವರು ಬೀದಿ ಬದಿ ವ್ಯಾಪಾರಿಗಳೊಂದಿಗೆ ನೇರ ಸಂವಾದ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು.
ನಂತರ ಮಾತನಾಡಿದ ಅವರು ಬೀದಿ ಬದಿ ವ್ಯಾಪಾರಿಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ವ್ಯಾಪಾರಿಗಳ ಹಿತರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮೈಸೂರು ಮಹಾನಗರ ಪಾಲಿಕೆಗೆ ಸೂಚನೆ ನೀಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಾಳೆ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚೆ ನಡೆಸಲಾಗುವುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ವೇ ನಡೆಸಲು ಹೊಸದಾಗಿ ಟೆಂಡರ್ ಕರೆಯಲಾಗಿದೆ. ಈ ಹಿಂದೆ ಟೆಂಡರ್ ಪಡೆದಿದ್ದ ಸಂಸ್ಥೆಯು ಸಮರ್ಪಕವಾಗಿ ಕೆಲಸ ನಿರ್ವಹಿಸದ ಕಾರಣ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು. ಹೀಗಾಗಿ, ಈ ಬಾರಿ ಪಾಲಿಕೆ ವತಿಯಿಂದ ಸರ್ವೇ ನಡೆಸಿ, ಯಾರಿಗೆಲ್ಲಾ ಗುರುತಿನ ಚೀಟಿ ಮಿಸ್ ಆಗಿದೆಯೋ, ಅವರಿಗೆ ತಪ್ಪದೇ ಕಾರ್ಡ್ ತಲುಪಿಸುವಂತೆ ಪಾಲಿಕೆ ಕಮಿಷನರ್ಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಸರ್ಕಾರ ನೀಡುವ ಆರ್ಥಿಕ ನೆರವು ಮತ್ತು ಸವಲತ್ತುಗಳನ್ನು ಬಳಸಿಕೊಂಡು ವ್ಯಾಪಾರವನ್ನು ಹೇಗೆ ವೃದ್ಧಿಸಿಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ನಿರ್ಧಾರಕ್ಕೆ ಬಿಟ್ಟಿದ್ದಾಗಿರುತ್ತದೆ. ಆದರೆ, ಸರ್ಕಾರದಿಂದ ಸಿಗಬೇಕಾದ ಮೂಲಭೂತ ಸೌಲಭ್ಯಗಳು ಪ್ರತಿಯೊಬ್ಬರಿಗೂ ಸರಿಯಾಗಿ ತಲುಪುತ್ತಿವೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವುದು ನಮ್ಮ ಕರ್ತವ್ಯ. ಒಂದು ವೇಳೆ ಸೌಲಭ್ಯ ತಲುಪದೇ ಇದ್ದರೆ, ಅದನ್ನು ಪ್ರತಿಯೊಬ್ಬರಿಗೂ ತಲುಪಿಸುವ ಪ್ರಾಮಾಣಿಕ ವ್ಯವಸ್ಥೆಯನ್ನು ನಮ್ಮ ಸರ್ಕಾರ ಮಾಡುತ್ತದೆ” ಎಂದು ಭರವಸೆ ನೀಡಿದರು.
ವ್ಯಾಪಾರಿಗಳ ಗುರುತಿಸುವಿಕೆ ಹಾಗೂ ಸರ್ಕಾರದ ಸೌಲಭ್ಯಗಳ ವಿತರಣಾ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕಗೊಳಿಸಲು ಅಧಿಕಾರಿಗಳೊಂದಿಗೆ ಶೀಘ್ರದಲ್ಲೇ ಮತ್ತೊಂದು ಪ್ರಮುಖ ಸಭೆಯನ್ನು ಆಯೋಜಿಸಲಾಗುವುದು ಎಂದು ಎಸ್.ಆರ್. ಶ್ರೀನಿವಾಸ್ ಅವರು ತಿಳಿಸಿದರು.
ಪರಿಶೀಲನೆಯ ವೇಳೆ ಸಮಿತಿಯ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯ ಶರವಣ್,ಸಮಿತಿಯ ಸದಸ್ಯರು ಹಾಗೂ ಹಿರಿಯ ಪತ್ರಕರ್ತರು ಹಾಗೂ ವಿಧಾನಪರಿಷತ್ ಸದಸ್ಯ ಕೆ ಶಿವಕುಮಾರ್,ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಡಿ. ಹರೀಶ್ ಗೌಡ,ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಅವರು ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಕ್ ತನ್ವಿರ್ ಆಸಿಫ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಜೊತೆಗಿದ್ದರು.








