ವಿಜಯ ದರ್ಪಣ ನ್ಯೂಸ್…..
ಎಸ್ಸಿಎಸ್ಪಿ/ಟಿಎಸ್ಪಿ ಸೌಲಭ್ಯ ಅರ್ಹರಿಗೆ ತಲುಪಲಿ
ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಕಾನೂನು ಕ್ರಮ:ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜೂನ್. 24 :
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ಶೋಷಣೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕಾಲ ಕಾಲಕ್ಕೆ ತಾಲ್ಲೂಕು ಮಟ್ಟದಲ್ಲಿ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಿ, ದೌರ್ಜನ್ಯ ಪ್ರಕರಣಗಳ ತಪ್ಪಿತಸ್ಥರ ವಿರುದ್ಧ ತ್ವರಿತ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ, ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಲು ನಿರ್ದೇಶನ ನೀಡಿದರು.
ಗ್ರಾಮೀಣ ಪ್ರದೇಶಗಳ ಜನರಲ್ಲಿ ಪೊಲೀಸ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.
09 ದೌರ್ಜನ್ಯ ಪ್ರಕರಣ ದಾಖಲು:
ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಇಲ್ಲಿಯವರೆಗೂ ಒಟ್ಟು 09 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ 09 ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಒಟ್ಟು 2.50 ಲಕ್ಷ ರೂ.ಗಳ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಅರ್ಹರಿಗೆ ತಲುಪಲಿ
ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗೆ ಇಲಾಖೆಗಳಿಗೆ ಒದಗಿಸಿದ ಅನುದಾನವನ್ನು ಸಂಪೂರ್ಣವಾಗಿ ಅರ್ಹರಿಗೆ ತಲುಪಿಸುವ ಮೂಲಕ ಅನುದಾನ ಪರಿಶಿಷ್ಟರ ಅಭಿವೃದ್ಧಿಗೆ ಸಮರ್ಪಕವಾಗಿ ಸದ್ಬಳಕೆ ಆಗಬೇಕು.
ಸುಳ್ಳು ದೌರ್ಜನ್ಯ ಪ್ರಕರಣ ದಾಖಲಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ನಾಲ್ಕು ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಆಸ್ಪತ್ರೆ ಬಂದ ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಹೊರಗುತ್ತಿಗೆ ಪೌರ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನವನ್ನು ಪಾವತಿಸಬೇಕು. ಕಸ ವಿಂಗಡಣೆ ಮಾಡಲು ಸುರಕ್ಷಿತ ಪರಿಕರಗಳನ್ನು ಒದಗಿಸಬೇಕು ಎಂದು ನಗರಾಭಿವೃದ್ದಿ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿನಿಲಯ ಹಾಗೂ ಹಾಸ್ಟೆಲ್ ಗಳಲ್ಲಿ 15 ದಿನಕ್ಕೊಮ್ಮೆ ಜಿಲ್ಲಾ ಮಟ್ಟದ ನೂಡಲ್ ಅಧಿಕಾರಿಗಳು ವಾಸ್ತವ್ಯ ಇದ್ದು, ಅಲ್ಲಿನ ಸ್ಥಿತಿಗತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುರಿತು ವರದಿ ನೀಡಲು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ವಾಸಂತಿ ಅಮರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚಂದ್ರಕಾಂತ ಎಂ.ವಿ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಮುಖ್ಯಯೋಜನಾಧಿಕಾರಿ ರಾಮಕೃಷ್ಣಯ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಟಿ.ಎಲ್.ಎಸ್. ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ನೆಲಮಂಗಲ:ಮಾವು ಬೆಳೆಗೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನ
ಬೆಂ.ಗ್ರಾ.ಜಿಲ್ಲೆ.ಜೂನ್: 24:
ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮಾವು ಬೆಳೆಯುವ ರೈತರು ತಮ್ಮ ಬೆಳಗಳಿಗೆ ವಿಮೆ(ಇನ್ಶುರೆನ್ಸ್) ಮಾಡಿಸಲು ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಮಾವು ಬೆಳೆಯುವ ತಾಲ್ಲೂಕಿನ ರೈತರು ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಾದ ಮಾವು ಬೆಳೆಗೆ ಪ್ರತಿ ಹೆಕ್ಟೇರಿಗೆ 80,000/- ವಿಮಾ ಮೊತ್ತ ಸಿಗಲಿದ್ದು, ರೈತರು ಶೇ 5 ರಂತೆ ಹೆಕ್ಟೇರ್ ಗೆ 4,000/-, ಅಥವಾ ಒಂದು ಎಕರೆಗೆ 1600/- ರೂ. ಮಾತ್ರ ವಿಮೆ(ಇನ್ಶುರೆನ್ಸ್) ಪಾವತಿ ಮಾಡಬೇಕು.
ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಮತ್ತು ಬೆಳೆ ವಿಮಾ ಕಂತು ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.
ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ/ಕಂದಾಯ ರಶೀದಿ/ಖಾತೆ ಪುಸ್ತಕ/ ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸುವುದು. ವಿಮೆ ಮಾಡಿಸುವ ರೈತರು FRUITS ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿ, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ, ವಿಮಾ ಕಂಪನಿ ಹಾಗೂ ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೂ. ಸಂಖ್ಯೆ: 9482129648, ಸಹಾಯಕ ತೋಟಗಾರಿಕೆ ನಿರ್ದೇಶಕರು ದೂ. ಸಂಖ್ಯೆ: 9902581832, ಕಸಬಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ದೂ. ಸಂಖ್ಯೆ: 9380815919, ಸೋಂಪುರ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ದೂ. ಸಂಖ್ಯೆ: 8884829971, ತ್ಯಾಮಗೊಂಡ್ಲು ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ದೂ. ಸಂಖ್ಯೆ: 8197655732, ಸೋಲೂರು ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ದೂ. ಸಂಖ್ಯೆ: 9886038164, ಕಂಪನಿಯ ಪ್ರತಿನಿಧಿ ದೂ. ಸಂಖ್ಯೆ: 9148894506 ಗೆ ಸಂಪರ್ಕಿಸಲು ನೆಲಮಂಗಲ ತಾಲ್ಲೂಕಿ ಹಿರಿಯ ಸಹಾಯಕ ತೋಟಗಾರಿಗೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











