ವಿಜಯ ದರ್ಪಣ ನ್ಯೂಸ್…
ಎಸ್.ಐ.ಆರ್.ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ :
ಜಿಲ್ಲಾಧಿಕಾರಿ ಜಿ. ಪ್ರಭು

ಶಿಡ್ಲಘಟ್ಟ : ಕೇವಲ 17 ದಿನಗಳಲ್ಲಿ ಶೇ. 76.68ರಷ್ಟು ಮತದಾರರನ್ನು ಕರಡು ಮತದಾರರ ಪಟ್ಟಿಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದೇವೆ 24 ವರ್ಷಗಳ ಬಳಿಕ ನಡೆಯುತ್ತಿರುವ ಈ ವಿಶೇಷ ಸಮಗ್ರ ಪರಿಷ್ಕರಣೆ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಪ್ರಭು
ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿಯ ಸಹಯೋಗದಲ್ಲಿ ನಗರದ ಬಸ್ ನಿಲ್ದಾಣದಿಂದ ಆಯೋಜಿಸಿದ್ದ ಎಸ್.ಐ.ಆರ್ ಮತದಾರರ ಪಟ್ಟಿ ಜಾಗೃತಿ ಕಾಲ್ನಡಿಗೆ ಜಾಥಾಕ್ಕೆ ಜಿಲ್ಲಾಧಿಕಾರಿ ಜಿ. ಪ್ರಭು ಮತ್ತು ಡಾ. ನವೀನ್ ಭಟ್ ಪಾರಿವಾಳ ಹಾರಿಸಿ, ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಳೆದ ತಿಂಗಳ 29ರಿಂದ ಎಸ್.ಐ.ಆರ್.ಕಾರ್ಯ ಆರಂಭಿಸಲಾಗಿದೆ ,ಬಿ.ಎಲ್.ಒ.ಗಳು, ಮೇಲ್ವಿಚಾರಕರು, ಸಹಾಯಕ ಚುನಾವಣಾ ನೋಂದಣಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಅವರ ಪರಿಶ್ರಮದಿಂದ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ
ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿ.ಇ.ಒ ಡಾ. ನವೀನ್ ಭಟ್ ಮಾತನಾಡಿ, ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಎಸ್.ಐ.ಆರ್ ಕುರಿತು ಮನೆ ,ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ ,ಸ್ವಚ್ಛತಾ ವಾಹನಗಳ ಮೂಲಕವೂ ನಾಗರಿಕರಿಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿ.ಎಲ್.ಒ) ಜೊತೆಗೆ ಪಿಡಿಒಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಸಹಾಯಕರು, ಡಿಇಒಗಳು, ಕರ ವಸೂಲಿಕಾರರು ಹಾಗೂ ನೀರುಗಂಟಿಗಳನ್ನು ನಿಯೋಜಿಸಿ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ ಎಂದರು.
ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಭದ್ರಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ನವೀನ್ ಭಟ್ ಮನವಿ ಮಾಡಿದರು.
ಎಸ್.ಐ.ಆರ್ ಕುರಿತು ಘೋಷವಾಕ್ಯಗಳಿರುವ ಫಲಕಗಳನ್ನು ಪ್ರದರ್ಶಿಸಿ, ಡೊಳ್ಳು ಕುಣಿತದ ಮೂಲಕ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಚಿಕ್ಕಬಳ್ಳಾಪುರ ಹಾಗೂ ಚಿಂತಾಮಣಿ ರಸ್ತೆ ವೃತ್ತದ ಬಳಿ ಮಾನವ ಸರಪಳಿಯನ್ನೂ ರಚಿಸಲಾಯಿತು.
ನಗರದ ಬಸ್ ನಿಲ್ದಾಣದಿಂದ ಪ್ರವಾಸಿ ಮಂದಿರದವರೆಗೆ ನಡೆದ ಜಾಥಾದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸ್ವಸಹಾಯ ಸಂಘದ ಸದಸ್ಯರು, ವಿಕಲಚೇತನರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಎಸ್.ಐ.ಆರ್. ಕಾರ್ಯದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು,ಜಿಲ್ಲೆಯಲ್ಲೇ ಮೊದಲ ಬಾರಿಗೆ ಶೇ 100ರಷ್ಟು ಪ್ರಗತಿ ಸಾಧಿಸಿದ ವೆಂಕಟಲಕ್ಷ್ಮಿ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತೀಕ್ ಪಾಷಾ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಎಸ್.ಎಸ್.ಅಬೀದ್, ತಾಲ್ಲೂಕು ಪಂಚಾಯಿತಿ ಇಒ ಆರ್.ಹೇಮಾವತಿ, ತಹಶೀಲ್ದಾರ್ ಗಗನ ಸಿಂಧು, ಪೌರಾಯುಕ್ತೆ ಅಮೃತ, ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್ ,ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ತಾಲ್ಲೂಕು ಆಡಳಿತದ ಸಿಬ್ಬಂದಿ ಪಾಲ್ಗೊಂಡಿದ್ದರು.









