ವಿಜಯ ದರ್ಪಣ ನ್ಯೂಸ್….
ಚಿಕ್ಕನಹಳ್ಳಿ ಲೆಜೆಂಡ್ಸ್ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಲೆಜೆಂಡ್ಸ್ ಪಬ್ಲಿಕ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ದೇಶಭಕ್ತಿ ವಾತಾವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆಯೊಂದಿಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ವಿವಿಧ ದೇಶಭಕ್ತಿ ಗೀತೆಗಳು, ನೃತ್ಯ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳ ಮನಮೋಹಕ ಪ್ರದರ್ಶನಗಳು ನೆರೆದಿದ್ದ ಪೋಷಕರು, ಶಿಕ್ಷಕರು ಹಾಗೂ ಗಣ್ಯರ ಮೆಚ್ಚುಗೆಗೆ ಪಾತ್ರವಾಗಿ ನೋಡುಗರ ಗಮನ ಸೆಳೆದವು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥರಾದ ಯರೇಗೌಡ ಮಾತನಾಡಿದ, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಮಾಡಿದ ತ್ಯಾಗ ಮತ್ತು ಹೋರಾಟವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಸ್ವಾತಂತ್ರ್ಯ ದಿನಾಚರಣೆ ಕೇವಲ ಸಂಭ್ರಮಕ್ಕೆ ಸೀಮಿತವಾಗದೆ, ದೇಶದ ಜವಾಬ್ದಾರಿಯುತ ನಾಗರಿಕರಾಗಿ ಬದುಕುವ ಸಂಕಲ್ಪದ ದಿನವಾಗಬೇಕು ಎಂದು ಹೇಳಿದರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಮುನಿನಾರಾಯಣಪ್ಪ ಮಾತನಾಡಿ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ರಾಷ್ಟ್ರಾಭಿಮಾನ ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸುವಲ್ಲಿ ಶಾಲಾ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಸರ್ಕಾರಿ ವಕೀಲರಾದ ಚಂದ್ರಕಲಾ ಹಾಗೂ ಶಾಲೆಯ ಮುಖ್ಯ ಶಿಕ್ಷಕರಾದ ಕಲಾವತಿ ಯರೇಗೌಡ ಹಾಗೂ ಸಹ ಶಿಕ್ಷಕರು ವಿದ್ಯಾರ್ಥಿಗಳು ಪೋಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.








