ವಿಜಯ ದರ್ಪಣ ನ್ಯೂಸ್….
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ, ಮತ್ತೋರ್ವಕಾರ್ಮಿಕನಿಗೆ ಗಂಭೀರ ಗಾಯ

ವಿರಾಜಪೇಟೆ: ತಾಲೂಕಿನ ಮಾಲ್ದಾರೆ ಸಮೀಪದ ಘಟ್ಟದಳ ಬಳಿಯ ಕಾಫಿ ತೋಟದಲ್ಲಿ ಕಾಡಾನೆ ದಾಳಿಗೆ ಹೊರ ರಾಜ್ಯದ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ಗೋಪಾಲ್ (44) ಎಂದು ಗುರುತಿಸಲಾಗಿದೆ. ದಾಳಿಯಲ್ಲಿ ಜಾದವ್ (26) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಫಿ ತೋಟದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಅರಣ್ಯದಂಚಿನಿಂದ ಕಾಡಾನೆ ಏಕಾಏಕಿ ತೋಟಕ್ಕೆ ಆಗಮಿಸಿ ದಾಳಿ ನಡೆಸಿದೆ ಎನ್ನಲಾಗಿದೆ. ಕಾಡಾನೆ ದಾಳಿ ಆರಂಭಿಸುತ್ತಿದ್ದಂತೆ ಕೆಲ ಕಾರ್ಮಿಕರು ಓಡಿ ತೆರಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಕಾರ್ಮಿಕರು ಹಾಗೂ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ











