ವಿಜಯ ದರ್ಪಣ ನ್ಯೂಸ್….
ಯಶಸ್ವಿಯಾಗಿ ನಡೆದ ವನ ಮಹೋತ್ಸವ : 120ಕ್ಕೂ ಹೆಚ್ಚು ಹಣ್ಣಿನ ಗಿಡಗಳ ನೆಡುವಿಕೆ

ಸಕಲೇಶಪುರ: ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ರೈಲ್ವೆ ಪೊಲೀಸ್ ಇಲಾಖೆಯ ವತಿಯಿಂದ ಸಕಲೇಶಪುರದಲ್ಲಿ ಹಮ್ಮಿಕೊಂಡಿದ್ದ ವನ ಮಹೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಪಟ್ಟಣದ ಕುಡುಗರಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 120 ಕ್ಕೂ ಹೆಚ್ಚು ಹಣ್ಣಿನ ಗಿಡಗಳನ್ನು ನೆಡಲಾಯಿತು.ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF) ಹಾಗೂ ಸೌತ್ ವೆಸ್ಟರ್ನ್ ರೈಲ್ವೆ (SWR), ಸಿಕಂದರಾಬಾದ್‌ನ 36ನೇ ಬ್ಯಾಚ್‌ನ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಿಡಗಳನ್ನು ನೆಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಪರಿಸರ ಪ್ರೇಮಿ ಇತಿಹಾಸ್, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಕೇವಲ ಗಿಡಗಳನ್ನು ನೆಡುವುದಷ್ಟೇ ಅಲ್ಲದೆ, ಅವುಗಳನ್ನು ಮಕ್ಕಳಂತೆ ಕಾಳಜಿಯಿಂದ ಬೆಳೆಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮಲೆನಾಡಿನ ಪರಿಸರ ಸಮತೋಲನ ಕಾಪಾಡುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ರೈಲ್ವೆ ಕ್ರೈಂ ಪೊಲೀಸ್ ಇಲಾಖೆಯ ಚೇತನ್ ಮಾತನಾಡಿ ನಮ್ಮ 36ನೇ ಬ್ಯಾಚ್ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ತಂಡ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ವಿವಿಧ ಜಾತಿಯ ಮಾವು,ಹಲಸು ಹಾಗೂ ಹಣ್ಣಿನ ಗಿಡಗಳನ್ನು ನೆಡಲಾಗಿದೆ. ನೆಟ್ಟ ಗಿಡಗಳ ಸಂರಕ್ಷಣೆ ಹಾಗೂ ಬೆಳವಣಿಗೆಗೆ ಅಗತ್ಯವಾದ ಕಾಳಜಿ ವಹಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಸಹನಾ, ಉಪನ್ಯಾಸಕರಾದ ಹರ್ಷ, ನವೀನ್ ಲೋಬೋ, ರೈಲ್ವೆ ಪೊಲೀಸ್ ಇಲಾಖೆ ಸಿಬ್ಬಂದಿಗಳು, ಪರಿಸರಾಸಕ್ತರು ಹಾಗೂ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಸಕಲೇಶಪುರದ ಹಸಿರು ಪರಿಸರವನ್ನು ಮತ್ತಷ್ಟು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ನಡೆದ ಈ ವನ ಮಹೋತ್ಸವ ಪರಿಸರ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಯಿತು ತಿಳಿಸಿದರು.











