--Ads--

ತಾವರೆಕೆರೆಯಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಜಾಥಾ

On: August 27, 2026 9:44 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ತಾವರೆಕೆರೆಯಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಜಾಥಾ

ತಾವರೆಕೆರೆ: ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದಲ್ಲಿ ಪೊಲೀಸ್ ಠಾಣೆ ಹಾಗೂ ತಾವರೆಕೆರೆ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾವರೆಕೆರೆ ಗ್ರಾಮದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.

ತಾವರೆಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಸಂಬಂಧಿತ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ವಿದ್ಯಾರ್ಥಿಗಳು ವಿವಿಧ ಜಾಗೃತಿ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದು, ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯಕರ ಹಾಗೂ ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಜನರಿಗೆ ಸಂದೇಶ ನೀಡಿದರು.

ಕಾರ್ಯಕ್ರಮಕ್ಕೆ ನಂದಗುಡಿ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಶಾಂತರಾಮ ಅವರು ಚಾಲನೆ ನೀಡಿ ಮಾತನಾಡಿ, ಇಂದಿನ ಯುವಜನತೆ ಹಾಗೂ ವಿದ್ಯಾರ್ಥಿಗಳು ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯದ ಜೊತೆಗೆ ಕುಟುಂಬ ಹಾಗೂ ಸಮಾಜದ ಮೇಲೂ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು, ತಮ್ಮ ವಿದ್ಯಾಭ್ಯಾಸ ಹಾಗೂ ಭವಿಷ್ಯದ ಗುರಿಗಳತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ತಾವರೆಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿ ಗಂಗಯ್ಯ ಅವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು. ವಿಶೇಷವಾಗಿ ಇಂದಿನ ದಿನಗಳಲ್ಲಿ ಮೊಬೈಲ್ ಫೋನ್‌ಗಳ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸ, ಏಕಾಗ್ರತೆ, ಸಮಯದ ನಿರ್ವಹಣೆ ಹಾಗೂ ಸಾಮಾಜಿಕ ಜೀವನದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ತಿಳಿಸಿದರು.

ಮೊಬೈಲ್ ಫೋನ್ ಅನ್ನು ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸಬೇಕು. ಮೊಬೈಲ್‌ನಲ್ಲೇ ಹೆಚ್ಚಿನ ಸಮಯ ಕಳೆಯುವ ಬದಲು ಪುಸ್ತಕ ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಮೊಬೈಲ್ ಬಿಟ್ಟು ಪುಸ್ತಕಕ್ಕೆ ಹತ್ತಿರವಾಗಿ ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಿದ ಅವರು, ಪುಸ್ತಕ ಓದುವುದರಿಂದ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಉತ್ತಮ ಚಿಂತನೆ ಮತ್ತು ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ರವಿಕುಮಾರ್ ಹಾಗೂ ಮಂಜುನಾಥ್, ಹಿರಿಯ ಪತ್ರಕರ್ತರಾದ ಟಿ ನಾಗರಾಜ್, ಹೊಸಕೋಟೆ ತಾಲೂಕು ಕಲಾವಿದರ ಸಂಘದ ಉಪಾಧ್ಯಕ್ಷರಾದ ಎಂ ಎನ್ ಆರ್ ನಟರಾಜ್, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಗುಲ್ಬದಿನ್ ತಾರಾ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಪ್ರವೀಣ್, ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಶಿಕ್ಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

WhatsApp

Join Now

Telegram

Join Now

Instagram

Join Now