--Ads--

ಜನರ ಮನೆ ಬಾಗಿಲಿಗೇ ಆಡಳಿತ ತಲುಪಿಸುವುದು ಸರ್ಕಾರದ ಗುರಿ: ಸಚಿವ ಎನ್. ಚಲುವರಾಯಸ್ವಾಮಿ

On: September 5, 2026 3:27 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮದ್ದೂರಿನಲ್ಲಿ ಜಿಲ್ಲಾ ಮಟ್ಟದ ‘ಪ್ರಜಾ ಸೇವೆ’ ಆಂದೋಲನ

ಜನರ ಮನೆ ಬಾಗಿಲಿಗೇ ಆಡಳಿತ ತಲುಪಿಸುವುದು ಸರ್ಕಾರದ ಗುರಿ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ, ಸೆ. 5: ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ ಉದ್ದೇಶದಿಂದ ‘ಪ್ರಜಾ ಸೇವೆ’ ಆಂದೋಲನವನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಮದ್ದೂರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಜಿಲ್ಲಾ ‘ಪ್ರಜಾ ಸೇವೆ’ ಆಂದೋಲನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದು 90 ದಿನಗಳು ಪೂರ್ಣಗೊಂಡಿದ್ದು, ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸುವ ಉದ್ದೇಶದಿಂದ ‘ಪ್ರಜಾ ಸೇವೆ’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಈ ರೀತಿಯ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದರು.

ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕಾಳಜಿಯಿಂದ ರೂಪುಗೊಂಡಿರುವ ‘ಪ್ರಜಾ ಸೇವೆ’ ವ್ಯವಸ್ಥೆಯಡಿ ಐಎಎಸ್ ದರ್ಜೆಯ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳು ಸಾರ್ವಜನಿಕರ ಕುಂದು-ಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಲಿದ್ದಾರೆ ಎಂದು ತಿಳಿಸಿದರು.

ಕಳೆದ ಮೂರು ವರ್ಷಗಳಿಂದ ಸಾರ್ವಜನಿಕರೊಂದಿಗೆ ನಿರಂತರವಾಗಿ ಸಭೆ ನಡೆಸಿ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದ್ದರೂ ಅರ್ಜಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಅರ್ಜಿಗಳನ್ನು ಹಿಡಿದು ಕಚೇರಿಗಳ ಸುತ್ತಾಡುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರತ್ಯೇಕ ವ್ಯವಸ್ಥೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಸುಮಾರು 24 ಸಾವಿರ ಸಾರ್ವಜನಿಕ ಅಹವಾಲುಗಳನ್ನು ಪರಿಹರಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸುಮಾರು ₹1,500 ಕೋಟಿ ವೆಚ್ಚ ಮಾಡಲಾಗಿದೆ. ಮಕ್ಕಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ರೈತರಿಗೆ ಶೇ.50ರಷ್ಟು ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ಮದ್ದೂರು ಪಟ್ಟಣದಲ್ಲಿ ಸುಮಾರು ₹137 ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಜನರ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲೂ ‘ಪ್ರಜಾ ಸೇವೆ’ ಆಂದೋಲನ ಕಾರ್ಯಕ್ರಮ ನಡೆಸಲಾಗುವುದು. ಅಧಿಕಾರಿಗಳು ಅರ್ಜಿಗಳನ್ನು ಕೇವಲ ಸ್ವೀಕರಿಸುವುದಕ್ಕೆ ಸೀಮಿತವಾಗದೆ, ಕಾನೂನುಬದ್ಧವಾಗಿ ಸಾಧ್ಯವಿರುವ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಾರ್ವಜನಿಕರು ಅರ್ಜಿಯಲ್ಲಿ ತಮ್ಮ ಸಮಸ್ಯೆಯ ಸಂಪೂರ್ಣ ವಿವರ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸರ್ಕಾರ ಬದ್ಧವಾಗಿದೆ. ಕಾನೂನುಬದ್ಧವಾಗಿ ರೈತರ ಪರವಾಗಿ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ. ಉದಯ ಅವರು ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಹಾಗೂ ಅವರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ‘ಪ್ರಜಾ ಸೇವೆ’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದರು.

ಜನರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭರಾಣಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಸಾರ್ವಜನಿಕರು ಹಾಗೂ ರೈತರಿಂದ ಕುಂದು-ಕೊರತೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ಅಧಿಕಾರಿಗಳು ಕ್ರಮ ಕೈಗೊಂಡರು.

WhatsApp

Join Now

Telegram

Join Now

Instagram

Join Now