ವಿಜಯ ದರ್ಪಣ ನ್ಯೂಸ್….
ತಾವರೆಕೆರೆ ಶನೇಶ್ವರ ಸ್ವಾಮಿ ದೇವಾಲಯದ 14ನೇ ವರ್ಷದ ವಾರ್ಷಿಕೋತ್ಸವ: 20 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನದಾಸೋಹ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ವರಪ್ರದಾಯಕ ಶ್ರೀ ಶನೇಶ್ವರ ಸ್ವಾಮಿ ದೇವಾಲಯದ 14ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.
ವಾರ್ಷಿಕೋತ್ಸವದ ಅಂಗವಾಗಿ ದೇವಾಲಯಕ್ಕೆ ಆಗಮಿಸಿದ 20 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿತ್ತು.
ದೇವಾಲಯದ ಪ್ರಧಾನ ಅರ್ಚಕರಾದ ಸುನಿಲ್ ಶಾಸ್ತ್ರಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಶ್ರೀ ಶನಿಮಹಾತ್ಮ ಸ್ವಾಮಿಗೆ ವಿಶೇಷ ಅಲಂಕಾರ, ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು. ನಂತರ ಭಕ್ತರಿಗೆ ತೀರ್ಥ-ಪ್ರಸಾದ ವಿತರಿಸಲಾಯಿತು.
ಕಡೆಯ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ದೇವಾಲಯಕ್ಕೆ ಭಕ್ತರ ದಂಡೇ ಹರಿದುಬಂದಿತ್ತು. ದೂರದ ಊರುಗಳಿಂದಲೂ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಶ್ರೀ ಶನೇಶ್ವರ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ದೇವಾಲಯದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಭಕ್ತರಿಗೆ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಶಾಸಕರಾದ ಶರತ್ ಬಚ್ಚೇಗೌಡ ಅವರು ಭಾಗವಹಿಸಿ ಶ್ರೀ ಶನೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ತಾವರೆಕೆರೆಯ ಶ್ರೀ ಶನೇಶ್ವರ ಸ್ವಾಮಿ ದೇವಾಲಯವು ಭಕ್ತರ ನಂಬಿಕೆ ಮತ್ತು ಶ್ರದ್ಧೆಯ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿ ಗುರುತಿಸಿಕೊಂಡಿದೆ ಎಂದು ಹೇಳಿದರು.ಶ್ರಾವಣ ಮಾಸದ ಕೊನೆಯ ಶನಿವಾರದಂದು ನಡೆಯುವ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದು ಸಂತಸದ ಸಂಗತಿಯಾಗಿದೆ.
ದೇವಾಲಯದ ವಾರ್ಷಿಕೋತ್ಸವವು ಧಾರ್ಮಿಕ ಆಚರಣೆಯ ಜೊತೆಗೆ ಗ್ರಾಮಸ್ಥರು ಹಾಗೂ ಭಕ್ತರನ್ನು ಒಗ್ಗೂಡಿಸುವ ಪ್ರಮುಖ ಕಾರ್ಯಕ್ರಮವಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರು ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಟಿ.ಎಸ್. ರಾಜಶೇಖರ್ ಅವರು ಮಾತನಾಡಿ, ತಾವರೆಕೆರೆ ಶ್ರೀ ಶನೇಶ್ವರ ಸ್ವಾಮಿ ದೇವಾಲಯವು ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ ಎಂದು ಹೇಳಿದರು.ದೇವಾಲಯದ ವಾರ್ಷಿಕೋತ್ಸವಕ್ಕೆ ಪ್ರತಿವರ್ಷ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಈ ಬಾರಿ 20 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಿರುವುದು ದೇವರ ಮೇಲಿರುವ ಭಕ್ತರ ಅಪಾರ ನಂಬಿಕೆಗೆ ಸಾಕ್ಷಿಯಾಗಿದೆ ಎಂದರು.
ವಾರ್ಷಿಕೋತ್ಸವಕ್ಕೆ ಆಗಮಿಸಿದ 20 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು. ಬೆಳಗ್ಗಿನಿಂದಲೇ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿದ್ದು, ದೇವರ ದರ್ಶನ ಪಡೆದ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಬಿ.ವಿ ರಾಜಶೇಖರ್ ಗೌಡರು, ಉದ್ಯಮಿಗಳಾದ ಬಿ.ವಿ ಬೈರೇಗೌಡರು, ಬೋಧನ ಹೊಸಹಳ್ಳಿ ಪ್ರಕಾಶ್, ತಾಲೂಕು ಮಟ್ಟದ ನಾಯಕರು ಹಾಗೂ ಶ್ರೀರಾಮವದೂತರ ಟ್ರಸ್ಟ್ ಎಲ್ಲಾ ಪದಾಧಿಕಾರಿಗಳು ಸಾವಿರಾರು ಸಂಖ್ಯೆ ಭಕ್ತ ಸಮೂಹ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.










