ವಿಜಯ ದರ್ಪಣ ನ್ಯೂಸ್……
ಕೆ.ಮುತ್ತುಗದಹಳ್ಳಿಯಲ್ಲಿ ಸರ್ಕಾರಿ ಸಾರಿಗೆ ಬಸ್ ಗಳನ್ನು
ತಡೆದು ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ

ಶಿಡ್ಲಘಟ್ಟ : ತಾಲ್ಲೂಕಿನ ಕೆ.ಮುತ್ತುಕದಹಳ್ಳಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಚಿಂತಾಮಣಿ ತಾಲ್ಲೂಕಿನ ಜಂಗಮಶೀಗೆಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಕೆಲ ಗ್ರಾಮಸ್ಥರು ತಡೆದು ತಮ್ಮ ಗ್ರಾಮಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಪ್ರತಿದಿನ ಬೆಳಗ್ಗೆ 7 ಗಂಟೆಗೆ ಶಿಡ್ಲಘಟ್ಟದಿಂದ-ಕನ್ನಮಂಗಲ ಗ್ರಾಮಕ್ಕೆ ತೆರಳುವ ಬಸ್ಸನ್ನು ಜಂಗಮಶೀಗೆಹಳ್ಳಿ ಗ್ರಾಮದವರೆಗೆ ವಿಸ್ತರಿಸಬೇಕು ಎಂದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿತ್ತು ,ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯ ಇಲ್ಲದಿರುವುದರಿಂದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದರು.
ಜೂನ್ ತಿಂಗಳಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದರೂ, ಹಲವು ದಿನಗಳು ಕಳೆದರೂ ಬಸ್ ವ್ಯವಸ್ಥೆಯಾಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾದರು.
ಬೆಳಗ್ಗೆ 7 ಗಂಟೆಯಿಂದ ಕೆ.ಮುತ್ತುಕದಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಐದು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದ ವಿದ್ಯಾರ್ಥಿಗಳು, ತಮ್ಮ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವವರೆಗೆ ಬಸ್‌ಗಳನ್ನು ಮುಂದೆ ತೆರಳಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು ,ವಿಷಯ ತಿಳಿದು ಸ್ಥಳಕ್ಕೆ 112 ಹೊಯ್ಸಳ ಪೊಲೀಸರು ಹಾಗೂ ಕೆಎಸ್‌ಆರ್‌ಟಿಸಿ ಡಿಪೋ ಅಧಿಕಾರಿಗಳು ಭೇಟಿ ನೀಡಿ ಮಾತುಕತೆ ನಡೆಸಿ ,ಸಮಸ್ಯೆಯನ್ನು ಡಿಪೋ ಕಚೇರಿಗೆ ಬಂದು ಲಿಖಿತವಾಗಿ ಸಲ್ಲಿಸುವಂತೆ ಹಾಗೂ ಮಾರ್ಗದ ಅವಶ್ಯಕತೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದರೂ, ಸ್ಪಷ್ಟ ಭರವಸೆ ದೊರೆಯುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರಿಂದ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ಮಧ್ಯಾಹ್ನ 11.30ರ ಸುಮಾರಿಗೆ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಧ್ಯಸ್ಥಿಕೆ ವಹಿಸಿ ಮಾತನಾಡಿ ಬಸ್‌ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸುವುದರಿಂದ ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟು, ಸಮಸ್ಯೆಯನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಗಮನಕ್ಕೆ ಲಿಖಿತವಾಗಿ ತಂದು ಕಾನೂನುಬದ್ಧವಾಗಿ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು ,ಸುಮಾರು ಐದು ಗಂಟೆಗಳ ಕಾಲ ನಡೆದ ಪ್ರತಿಭಟನೆಯ ಬಳಿಕ ಪೊಲೀಸರ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿದು ಬಸ್ ಗಳು ಓಡಾಡಲು ಬಿಟ್ಟರು.
ಪ್ರತಿಭಟನೆಯಿಂದಾಗಿ ಕೆ.ಮುತ್ತುಕದಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ಗಳ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಅನಾನುಕೂಲ ಅನುಭವಿಸಿದರು ,ಬೆಂಗಳೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಹಾಗೂ ಶಿಡ್ಲಘಟ್ಟ ಕಡೆಗೆ ತೆರಳಬೇಕಿದ್ದ ಕೆಲ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮೊಟಕುಗೊಳಿಸಿ ಮನೆಗಳಿಗೆ ಹಿಂದಿರುಗಿದರು.
ಜಂಗಮಶೀಗೆಹಳ್ಳಿ ಗ್ರಾಮಕ್ಕೆ ಬೆಳಗಿನ ಬಸ್ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿರುವ ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವ ರೀತಿಯಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸದಂತೆ ಪೊಲೀಸರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.











