ವಿಜಯ ದರ್ಪಣ ನ್ಯೂಸ್…..
ತಾವರೆಕೆರೆಯಲ್ಲಿ ಅದ್ಧೂರಿಯಾಗಿ ಜೈ ಭೀಮ್ ವಿನಾಯಕ ಗೆಳೆಯರ ಬಳಗದ 27ನೇ ವರ್ಷದ ಗಣೇಶೋತ್ಸವ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ಜೈ ಭೀಮ್ ವಿನಾಯಕ ಗೆಳೆಯರ ಬಳಗದ ವತಿಯಿಂದ 27ನೇ ವರ್ಷದ ಗಣೇಶೋತ್ಸವವನ್ನು ಐದು ದಿನಗಳ ಕಾಲ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಗಣೇಶೋತ್ಸವದ ಅಂಗವಾಗಿ ಐದು ದಿನಗಳ ಕಾಲ ಪ್ರತಿದಿನ ವಿಶೇಷ ಪೂಜಾ ಕಾರ್ಯಕ್ರಮಗಳು, ವಿವಿಧ ಧಾರ್ಮಿಕ ಚಟುವಟಿಕೆಗಳು ಹಾಗೂ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗವನ್ನು ಆಯೋಜಿಸಲಾಗಿತ್ತು.
ಗಣೇಶೋತ್ಸವದ ಅಂಗವಾಗಿ ಮಕ್ಕಳಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳು, ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಮಹಿಳೆಯರು, ಮಕ್ಕಳು, ಯುವಕರು ಸೇರಿದಂತೆ ಗ್ರಾಮದ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಗಳಿಗೆ ಮೆರುಗು ತಂದರು.
ಈ ಬಾರಿ 27ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಸುಮಾರು 20 ಅಡಿ ಎತ್ತರದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ವಿಶೇಷ ಅಲಂಕಾರ ಹಾಗೂ ವಿದ್ಯುತ್ ದೀಪಾಲಂಕಾರಗಳಿಂದ ಗಣೇಶ ಮಂಟಪ ಆಕರ್ಷಣೀಯವಾಗಿ ಕಂಗೊಳಿಸಿತು. ಪ್ರತಿದಿನ ಸಂಜೆ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಈ ಕುರಿತು ಮಾತನಾಡಿದ ಗಣೇಶೋತ್ಸವದ ಆಯೋಜಕ ಕಿರಣ್ “ಜೈ ಭೀಮ್ ವಿನಾಯಕ ಗೆಳೆಯರ ಬಳಗದ ವತಿಯಿಂದ ಕಳೆದ 26 ವರ್ಷಗಳಿಂದ ನಿರಂತರವಾಗಿ ಗಣೇಶೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ 27ನೇ ವರ್ಷದ ಗಣೇಶೋತ್ಸವವನ್ನು ಇನ್ನಷ್ಟು ವಿಶೇಷವಾಗಿ ಆಚರಿಸುವ ಉದ್ದೇಶದಿಂದ 20 ಅಡಿ ಎತ್ತರದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಐದು ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರು ಹಾಗೂ ಭಕ್ತಾದಿಗಳು ನೀಡಿದ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ” ಎಂದು ಹೇಳಿದರು.
ಸಂಘದ ಮುಖಂಡ ಟಿ.ಕೆ. ಮಂಜುನಾಥ್ ಮಾತನಾಡಿ, ಗಣೇಶೋತ್ಸವವು ಕೇವಲ ಧಾರ್ಮಿಕ ಕಾರ್ಯಕ್ರಮವಾಗಿರದೆ ಗ್ರಾಮದ ಜನರನ್ನು ಒಗ್ಗೂಡಿಸುವ ಹಾಗೂ ಯುವಕರಲ್ಲಿ ಸಂಘಟನಾ ಮನೋಭಾವ ಬೆಳೆಸುವ ವೇದಿಕೆಯಾಗಿದೆ. ಪ್ರತಿವರ್ಷವೂ ಗ್ರಾಮಸ್ಥರ ಸಹಕಾರದೊಂದಿಗೆ ಉತ್ಸವವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.











