ವಿಜಯ ದರ್ಪಣ ನ್ಯೂಸ್……
ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಅರ್ಥಪೂರ್ಣವಾಗಿ ಗಾಂಧೀ ಜಯಂತಿ ಆಚರಣೆ
ನಾಗರಿಕರು ತಮ್ಮ ಮೊದಲ ಆದ್ಯತೆಯನ್ನು ಸ್ವಚ್ಛತೆಗೆ ನೀಡಬೇಕು : ಪಿಡಿಒ ಮುನಿಗಂಗಯ್ಯ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜನ್ಮ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗಾಂಧೀ ಜಯಂತಿಯ ಅಂಗವಾಗಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತಾ ಕಾರ್ಯಕ್ಕೆ ವಿಶೇಷ ಆದ್ಯತೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿಗಂಗಯ್ಯ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಜೀವನ ಮತ್ತು ಆದರ್ಶಗಳು ಇಂದಿಗೂ ಪ್ರತಿಯೊಬ್ಬರಿಗೂ ಮಾರ್ಗದರ್ಶಕವಾಗಿವೆ ಎಂದು ಹೇಳಿದರು. ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಅಹಿಂಸೆ, ಸತ್ಯ ಮತ್ತು ಸರಳ ಜೀವನದ ಮೂಲಕ ದೇಶದ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಸ್ವಚ್ಛತೆಯ ಬಗ್ಗೆ ಅವರು ಹೊಂದಿದ್ದ ಕಾಳಜಿಯೂ ಗಮನಾರ್ಹವಾಗಿದ್ದು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸ್ವಚ್ಛತೆ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
“ಸ್ವಚ್ಛತೆ ಕೇವಲ ಒಂದು ದಿನದ ಕಾರ್ಯಕ್ರಮ ವಾಗಬಾರದು. ಪ್ರತಿಯೊಬ್ಬರೂ ತಮ್ಮ ಮನೆ, ಸುತ್ತಮುತ್ತಲಿನ ಪ್ರದೇಶ, ಸಾರ್ವಜನಿಕ ಸ್ಥಳಗಳು ಹಾಗೂ ಗ್ರಾಮವನ್ನು ಸ್ವಚ್ಛವಾಗಿಡುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಗ್ರಾಮಗಳ ಅಭಿವೃದ್ಧಿಯಲ್ಲಿ ಸ್ವಚ್ಛತೆ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಮುನಿಗಂಗಯ್ಯ ತಿಳಿಸಿದರು.

ಅವರು ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸಂರಕ್ಷಣೆ ಹಾಗೂ ಪರಿಸರ ರಕ್ಷಣೆಗೆ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಜನರು ಸ್ವಚ್ಛತಾ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರೆ ಗ್ರಾಮದಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಕೇವಲ ಜಯಂತಿ ದಿನದಂದು ಸ್ಮರಿಸುವುದಕ್ಕೆ ಸೀಮಿತಗೊಳಿಸದೆ, ಅವುಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆ, ಸ್ವಾವಲಂಬನೆ ಮತ್ತು ಸ್ವಚ್ಛತೆಯ ಸಂದೇಶಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ ಎಂದು ತಿಳಿಸಿದರು.
ಗ್ರಾಮದ ಅಭಿವೃದ್ಧಿಯಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯವಾಗಿದ್ದು, ಗ್ರಾಮ ಪಂಚಾಯಿತಿ ಕೈಗೊಳ್ಳುವ ಸ್ವಚ್ಛತಾ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮಸ್ಥರು ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದಿರುವುದು, ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದು ಹಾಗೂ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆಡಳಿತ ಅಧಿಕಾರಿ ರೇಣುಕ ಪ್ರಸಾದ್, ಮಾಜಿ ಅಧ್ಯಕ್ಷರಾದ ಗಂಗಾಪುರ ಮಂಜುನಾಥ್, ಬಸವ ಪ್ರಕಾಶ್, ರಮೇಶ್, ಮಾಜಿ ಉಪಾಧ್ಯಕ್ಷ ಸುಧಾಕರ್, ಕರ ವಸೂಲಿಗಾರ ರಾಜಣ್ಣ, ಪಂಚಾಯಿತಿ ಸಿಬ್ಬಂದಿ ಬಚ್ಚೇಗೌಡ ಮಂಜುನಾಥ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.










