ವಿಜಯ ದರ್ಪಣ ನ್ಯೂಸ್…
ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ೧೫ ಸಾವಿರ ಮಾಸಿಕ ಗೌರವಧನ ನೀಡುವುದು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಶುಕ್ರವಾರ ನಗರದ ಆಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯಾದ್ಯಂತ ಅಕ್ಟೋಬರ್ ೫ರಿಂದ ೧೧ರವರೆಗೆ ಹಮ್ಮಿಕೊಂಡಿರುವ ಪ್ರತಿಭಟನಾ ಸಪ್ತಾಹದ ಅಂಗವಾಗಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಆಶಾ ಕಾರ್ಯಕರ್ತೆಯರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕಳೆದ ಒಂಬತ್ತು ವರ್ಷಗಳಲ್ಲಿ ಕೇವಲ ೧,೫೦೦ರಷ್ಟು ಗೌರವಧನ ಹೆಚ್ಚಳವಾಗಿದೆ. ಬೆಲೆ ಏರಿಕೆಗೆ ಅನುಗುಣವಾಗಿ ಗೌರವಧನ ಹೆಚ್ಚಿಸದಿರುವುದರಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೀಡುವ ಪ್ರೋತ್ಸಾಹಧನ ಹಾಗೂ ಗೌರವಧನವನ್ನು ಒಟ್ಟುಗೂಡಿಸಿ ಕನಿಷ್ಠ ೧೫ ಸಾವಿರ ಮಾಸಿಕ ಗೌರವಧನ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಗೌರವಧನ ಮತ್ತು ಪ್ರೋತ್ಸಾಹಧನವನ್ನು ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಪಾವತಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಗುಣಮಟ್ಟದ ಮೊಬೈಲ್ಗಳನ್ನು ಒದಗಿಸುವುದರ ಜತೆಗೆ ಸಮಸ್ತ ಆ?ಯಪ್ನಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.
ಆರೋಗ್ಯ ಇಲಾಖೆಯು ಸಮಸ್ತ ಅಪ್ ಬಳಕೆಯನ್ನು ಕಡ್ಡಾಯಗೊಳಿಸುತ್ತಿದ್ದರೂ ಅಗತ್ಯ ಮೊಬೈಲ್ ಸೌಲಭ್ಯ, ತಾಂತ್ರಿಕ ತರಬೇತಿ ಮತ್ತು ಸೂಕ್ತ ಪ್ರೋತ್ಸಾಹಧನ ಒದಗಿಸಿಲ್ಲ. ಅಪ್ನಲ್ಲಿ ಮಾಹಿತಿ ದಾಖಲಿಸುವಾಗ ದಾಖಲೆಗಳು ಉಳಿಯದಿರುವುದು, ಸಿಂಕ್ರನೈಜೇಷನ್ ಸಮಸ್ಯೆ, ದಾಖಲೆಗಳು ಕಣ್ಮರೆಯಾಗುವುದು ಹಾಗೂ ಪುನರಾವರ್ತಿತ ದಾಖಲಾತಿಯಿಂದ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸದ ಹೊರೆ ಉಂಟಾಗುತ್ತಿದೆ ಎಂದು ದೂರಿದರು.
ಕ್ಷೇತ್ರಮಟ್ಟದಲ್ಲಿ ಜನರಿಗೆ ಆರೋಗ್ಯ ಸೇವೆ ಒದಗಿಸುವುದರ ಜತೆಗೆ ಭೌತಿಕ ಮತ್ತು ಡಿಜಿಟಲ್ ದಾಖಲೆಗಳನ್ನು ನಿರ್ವಹಿಸುವುದು ಕಷ್ಟಕರವಾಗಿದ್ದು, ಅಗತ್ಯ ಮೂಲಸೌಕರ್ಯ ಕಲ್ಪಿಸದೆ ಅಪ್ ಬಳಕೆಗೆ ಒತ್ತಡ ಹೇರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಜಿಲ್ಲೆಯ ಆಶಾ ಕಾರ್ಯಕರ್ತೆಯರ ಪಿಎಕ್ಸಿ ವಾರಿನ ಕ್ಷೇಮ್ ಮತ್ತು ರಿಲೀಸ್ ವಿವರಗಳು ಹಾಗೂ ಟಿ.ಬಿ.ಐ. ಪ್ರೋತ್ಸಾಹಧನದ ವಿವರಗಳ ಸಾಫ್ಟ್ಕಾಪಿ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಕನಿಷ್ಠ ೧೫ ಸಾವಿರ ಮಾಸಿಕ ಗೌರವಧನ ನೀಡುವುದರ ಜತೆಗೆ ಬಾಕಿ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು ಮತ್ತು ಸಮಸ್ತ ಅಪ್ನಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು. ಸರ್ಕಾರ ಕೂಡಲೇ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ.
ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷೆ ರಮಾ, ಜಿಲ್ಲಾ ಅಧ್ಯಕ್ಷ ತಾರಾಕೃಷ್ಣ, ಶಿವಪ್ರಕಾಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು











