ವಿಜಯ ದರ್ಪಣ ನ್ಯೂಸ್…..
ಆರೋಗ್ಯವಂತ ತಾಯಿಯಿಂದ ಮಾತ್ರ ಆರೋಗ್ಯವಂತ ಮಗು ಸಾಧ್ಯ: ಅಮರೇಶ್ ಹಾವಿನ್ ಪೋಶನ್

ಗಂಗಾವತಿ: ಆರೋಗ್ಯವಂತ ಮಗು ದೇಶದ ನಿಜವಾದ ಸಂಪತ್ತು. ತಾಯಿ ಆರೋಗ್ಯವಾಗಿದ್ದಾಗ ಮಾತ್ರ ಆರೋಗ್ಯವಂತ ಮಗುವಿನ ಜನನ ಸಾಧ್ಯ. ಆದ್ದರಿಂದ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ನೀಡುವುದರ ಜೊತೆಗೆ ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಅಮರೇಶ್ ಹಾವಿನ್ ಹೇಳಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಪೋಶನ್ ಅಭಿಯಾನ ಮಾಸಾಚರಣೆ-2026ರ ಸಮಾರೋಪ ಸಮಾರಂಭಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ದೇಶವು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿದ್ದರೂ ತಾಯಿ ಮತ್ತು ಮಗುವಿನ ಆರೋಗ್ಯದ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗರ್ಭಿಣಿಯರು ಹಾಗೂ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಮತ್ತು ಜನರಲ್ಲಿ ಪೌಷ್ಟಿಕ ಆಹಾರದ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ಪೋಶನ್ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.
ಗಂಗಾವತಿಯಲ್ಲಿ ಒಂಬತ್ತನೇ ವರ್ಷದ ಅಭಿಯಾನ ಮಾಸಾಚರಣೆ ನಡೆಯುತ್ತಿರುವುದು ವಿಶೇಷವಾಗಿದೆ. ಗರ್ಭಿಣಿಯರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವೈದ್ಯಾಧಿಕಾರಿಗಳು ನೀಡುವ ಪೌಷ್ಟಿಕ ಆಹಾರ ಮತ್ತು ಆರೋಗ್ಯದ ಕುರಿತ ಸಲಹೆಗಳನ್ನು ಪಾಲಿಸಬೇಕು.
ಸಮತೋಲಿತ ಆಹಾರ ಸೇವನೆ. ನಿಯಮಿತ ಆರೋಗ್ಯ ತಪಾಸಣೆ ಹಾಗೂ ವೈದ್ಯರ ಮಾರ್ಗದರ್ಶನದಿಂದ ತಾಯಿ ಮತ್ತು ಮಗುವಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಗರ್ಭಾವಸ್ಥೆಯಿಂದಲೇ ಸೂಕ್ತ ಪೌಷ್ಟಿಕತೆ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ವಹಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ್ ಬಿ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹುಲಗಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಶರಣಪ್ಪ ಗದ್ದಿ ಹಾಗೂ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಸನ್ನ ಕಲ್ಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಕ್ಕಳು ಭಾಗವಹಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಮುದ್ದು ಮಕ್ಕಳ ಉಪಸ್ಥಿತಿ ಹಾಗೂ ವಿವಿಧ ಬಗೆಯ ಆಕರ್ಷಕ ರಂಗೋಲಿಗಳು ಗಮನ ಸೆಳೆದವು.
ಕಾರ್ಯಕ್ರಮಕ್ಕೆ ಆಗಮಿಸಿದ ಅಧಿಕಾರಿಗಳನ್ನು ಪೂರ್ಣಕುಂಭದೊಂದಿಗೆ ವೇದಿಕೆಗೆ ಬರಮಾಡಿಕೊಳ್ಳಲಾಯಿತು.
ಸಮಾರಂಭದಲ್ಲಿ ಮೂಲಸೌಕರ್ಯಗಳ ಕೊರತೆ: ಪೌಷ್ಟಿಕತೆ ಮತ್ತು ಮಕ್ಕಳ ಆರೋಗ್ಯದ ಮಹತ್ವ ಸಾರುವ ಕಾರ್ಯಕ್ರಮ ನಡೆದ ಕನ್ನಡ ಸಾಹಿತ್ಯ ಭವನದಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಇರಲಿಲ್ಲ. ಸಭಾಂಗಣ ಕತ್ತಲಿನಿಂದ ಕೂಡಿದ್ದು, ಧ್ವನಿವರ್ಧಕ ವ್ಯವಸ್ಥೆಯೂ ಅಸಮರ್ಪಕವಾಗಿತ್ತು. ಗಾಳಿ ಮತ್ತು ಬೆಳಕಿನ ಕೊರತೆಯಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಕ್ಕಳು ತೊಂದರೆ ಅನುಭವಿಸುವಂತಾಯಿತು.
ತಾಯಿ ಮತ್ತು ಮಕ್ಕಳ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳಿಗೆ ಸೂಕ್ತ ಸಭಾಂಗಣ, ಉತ್ತಮ ಧ್ವನಿವರ್ಧಕ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೆಕೆಂಬ ಅಭಿಪ್ರಾಯಗಳು ವ್ಯಕ್ತವಾದವು.








