ವಿಜಯ ದರ್ಪಣ ನ್ಯೂಸ್…..
ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಪೌಷ್ಟಿಕ ಆಹಾರ ಅತ್ಯಗತ್ಯ : ತಹಶಿಲ್ದಾರ್ ಎನ್.ಗಗನಸಿಂಧು

ಶಿಡ್ಲಘಟ್ಟ : ಆರೋಗ್ಯಕರ ತಾಯಿ, ಸದೃಢ ಮಗು, ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಪೌಷ್ಟಿಕ ಆಹಾರ ಅತ್ಯಗತ್ಯ
ಅಪೌಷ್ಟಿಕತೆಯಿಂದ ಮಕ್ಕಳ ದೈಹಿಕ ಬೆಳವಣಿಗೆ, ಕಲಿಕಾ ಸಾಮರ್ಥ್ಯ ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಉಂಟಾಗಬಹುದು ಎಂದು ತಹಶೀಲ್ದಾರ್ ಎನ್.ಗಗನ ಸಿಂಧು ತಿಳಿಸಿದರು.
ನಗರದ ಸ್ತ್ರೀ ಶಕ್ತಿ ಭವನದಲ್ಲಿ ಇತ್ತೀಚೆಗೆ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಕಾನೂನು ಸೇವಾ ಪ್ರಾಧಿಕಾರ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪೋಷಣೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗರ್ಭಿಣಿಯರು ಮತ್ತು ಬಾಣಂತಿಯರು ಪೌಷ್ಟಿಕಾಂಶಯುಕ್ತ ಆಹಾರ ಸೇವನೆಗೆ ಆದ್ಯತೆ ನೀಡಬೇಕು ಮಕ್ಕಳಿಗೆ ವಯಸ್ಸಿಗೆ ಅನುಗುಣವಾಗಿ ಸಮತೋಲಿತ ಆಹಾರ ನೀಡುವ ಕುರಿತು ಕುಟುಂಬಗಳಲ್ಲಿ ಜಾಗೃತಿ ಮೂಡಿಸಬೇಕು ,ಪೌಷ್ಟಿಕ ಆಹಾರದ ಮಹತ್ವವನ್ನು ಮನೆಮನೆಗೂ ತಲುಪಿಸುವ ಕೆಲಸವಾಗಬೇಕು ಎಂದು ಹೇಳಿದರು.
ಪೌಷ್ಟಿಕ ಆಹಾರದ ಮಹತ್ವದ ಕುರಿತು ಮಹಿಳೆಯರು ,
ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಲ್ಲಿ ಅರಿವು ಮೂಡಿಸುವ ಮೂಲಕ ಅಪೌಷ್ಟಿಕತೆ ನಿವಾರಣೆಗೆ ಎಲ್ಲರೂ ಕೈಜೋಡಿಸಬೇಕು ,ಸ್ಥಳೀಯವಾಗಿ ಲಭ್ಯವಿರುವ ಸಿರಿಧಾನ್ಯಗಳು, ಬೇಳೆಕಾಳುಗಳು, ಹಸಿರು ಸೊಪ್ಪು, ತರಕಾರಿಗಳು, ಹಣ್ಣುಗಳು ಹಾಗೂ ಪ್ರೋಟೀನ್ಯುಕ್ತ ಆಹಾರವನ್ನು ದೈನಂದಿನ ಆಹಾರದಲ್ಲಿ ಅಳವಡಿಸಿ
ಕೊಳ್ಳುವಂತೆ ಜನರಿಗೆ ತಿಳಿವಳಿಕೆ ನೀಡಬೇಕು ಎಂದು ನುಡಿದರು.
ಅಪೌಷ್ಟಿಕತೆಯ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೆ ಆರೋಗ್ಯ ಕಾರ್ಯಕರ್ತರ ಸಲಹೆ ಪಡೆಯುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.
ಕೇವಲ ಕಾರ್ಯಕ್ರಮಗಳಿಗೆ ಸೀಮಿತವಾಗದೆ,
ಜನರ ಆಹಾರ ಪದ್ಧತಿ ಮತ್ತು ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ನಿರಂತರ ಅಭಿಯಾನವಾಗಬೇಕು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ, ತಾಯಿ ಮತ್ತು ಮಕ್ಕಳ ಆರೋಗ್ಯ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿದ್ಯಾ ವಸ್ತ್ರದ್ ಮಾತನಾಡಿ, ಪೌಷ್ಟಿಕ ಆಹಾರ, ವೈಯಕ್ತಿಕ ಸ್ವಚ್ಛತೆ, ಆರೋಗ್ಯಕರ ಜೀವನಶೈಲಿ ಹಾಗೂ ಮಕ್ಕಳ ಬೆಳವಣಿಗೆಯ ಮೇಲ್ವಿಚಾರಣೆ ಹಾಗು ಮಹಿಳೆಯರು ಮತ್ತು ಮಕ್ಕಳ ಪೌಷ್ಟಿಕತೆ ಸುಧಾರಿಸುವಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ ಎಂದರು.
ಪೌಷ್ಟಿಕ ಆಹಾರ, ವೈಯಕ್ತಿಕ ಸ್ವಚ್ಛತೆ, ಆರೋಗ್ಯಕರ ಜೀವನಶೈಲಿ ಹಾಗೂ ಮಕ್ಕಳ ಬೆಳವಣಿಗೆಯ ಮೇಲ್ವಿಚಾರಣೆ ಕುರಿತು ಸಾರ್ವಜನಿಕರಲ್ಲಿ ನಿರಂತರ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ, ಆರೋಗ್ಯ ಇಲಾಖೆಯ ಡಾ. ವಿಜಯ್ ಕುಮಾರ್ ಹಾಗೂ ಸಿಬ್ಬಂದಿ, ರಾಜಸ್ವ ನಿರೀಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.








