ಸೌಮ್ಯಾ ರೆಡ್ಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಮಹಿಳಾ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಪತ್ರವನ್ನು ಸೌಮ್ಯಾ ರೆಡ್ಡಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರವಾನಿಸಿರುವುದು ಬಹಿರಂಗವಾಗಿದೆ.
ಸೌಮ್ಯಾ ರೆಡ್ಡಿ ಅವರು 2026ರ ಆಗಸ್ಟ್ 20ರಂದೇ ರಾಜೀನಾಮೆ ಪತ್ರವನ್ನು ಕಳುಹಿಸಿಕೊಟ್ಟಿದ್ದರು ಎನ್ನಲಾಗಿದೆ. ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದಿರುವ ಬಗ್ಗೆ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿರುವ ಅವರು, ಮಹಿಳೆಯರಿಗೆ ಸಚಿವ ಸ್ಥಾನ ಕಲ್ಪಿಸುವಂತೆ ಪಕ್ಷದ ಹೈಕಮಾಂಡ್ನ ಗಮನ ಸೆಳೆದಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವ ವಿಚಾರ ಕಾಂಗ್ರೆಸ್ ಪಕ್ಷದೊಳಗೆ ಈ ಹಿಂದಿನಿಂದಲೂ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಕುರಿತು ಹಲವು ಬಾರಿ ಚರ್ಚೆಗಳು ನಡೆದಿದ್ದರೂ, ಮಹಿಳೆಯರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕೂಡ ಈ ವಿಚಾರವಾಗಿ ಪ್ರತಿಕ್ರಿಯಿಸಿ, ಮಹಿಳೆಯರಿಗೆ ಸಚಿವ ಸ್ಥಾನ ದೊರೆಯದಿರುವುದಕ್ಕೆ ತಾವೇ ಕಾರಣ ಎಂದು ಹೇಳಿಕೆ ನೀಡಿದ್ದರು. ಬಳಿಕ ಮಹಿಳೆಯರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನೂ ಹೈಕಮಾಂಡ್ ನೀಡಿತ್ತು. ಆದರೆ, ಇದುವರೆಗೂ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಮುಂದುವರಿಕೆ ಸ್ಪಷ್ಟನೆ: ಪಕ್ಷದ ಹಿತದೃಷ್ಟಿಯಿಂದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಘಟಕಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ತಾವೇ ಹುದ್ದೆಯಲ್ಲಿ ಮುಂದುವರಿಯುವುದಾಗಿ ಸೌಮ್ಯಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಮುಂದುವರಿಯುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಇದಲ್ಲದೆ, 2028ರ ವಿಧಾನಸಭೆ ಚುನಾವಣೆ ಹಾಗೂ 2029ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿಯೂ ಅವರು ಭರವಸೆ ನೀಡಿದ್ದಾರೆ.
ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ವಿಚಾರವಾಗಿ ಪಕ್ಷದೊಳಗೆ ಅಸಮಾಧಾನ ಮುಂದುವರಿದಿರುವ ನಡುವೆಯೇ ಸೌಮ್ಯಾ ರೆಡ್ಡಿ ಅವರ ರಾಜೀನಾಮೆ ವಿಚಾರ ಬಹಿರಂಗವಾಗಿರುವುದು ಕಾಂಗ್ರೆಸ್ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ.












