ವಿಜಯ ದರ್ಪಣ ನ್ಯೂಸ್….
ಶಾಂತವೇರಿ ಘಾಟಿಯಲ್ಲಿ ಕ್ಯಾಂಟರ್‌ಗೆ ಬೆಂಕಿ

ತರೀಕೆರೆ: ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಟೈರ್ ಸ್ಫೋಟಗೊಂಡ ಪರಿಣಾಮ ಅಗ್ನಿಶಾಮಕ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ವಾಹನದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ವಾಹನ ಚಲಾಯಿಸುತ್ತಿದ್ದ ಚಾಲಕ ಬೆಂಕಿಯ ಜ್ವಾಲೆಯನ್ನು ಗಮನಿಸಿದ ತಕ್ಷಣ ಸಮಯಪ್ರಜ್ಞೆ ಮೆರೆದು ವಾಹನದಿಂದ ಕೆಳಕ್ಕೆ ಹಾರಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರಗೊಂಡು ವಾಹನವನ್ನು ಸಂಪೂರ್ಣವಾಗಿ ಆವರಿಸಿದೆ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ವಾಹನದಲ್ಲಿ ಉಂಟಾದ ತೀವ್ರ ಉಷ್ಣಾಂಶದಿಂದ ಟೈರ್ ರಭಸದಿಂದ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅಗ್ನಿಶಾಮಕ ಸಿಬ್ಬಂದಿ ಶಿವಪ್ರಸಾದ್ ಅವರ ಕೈ, ಮುಖ ಹಾಗೂ ಎದೆಯ ಭಾಗಕ್ಕೆ ಗಾಯಗಳಾಗಿವೆ.
ಗಾಯಾಳು ಶಿವಪ್ರಸಾದ್ ಅವರನ್ನು ತಕ್ಷಣ ತರೀಕೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿ ಅವಘಡದಿಂದ ಕ್ಯಾಂಟರ್ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆ ಲಿಂಗದಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.











