ವಿಜಯ ದರ್ಪಣ ನ್ಯೂಸ್……
71ನೇ ಕನ್ನಡ ರಾಜ್ಯೋತ್ಸವ ಕಲರವ
ಪಾರಿವಾಳ ಗುಟ್ಟದ ಬಳಿ ಕನ್ನಡ ಭವನ, ಆವತಿ ಬಳಿ ಕೆಂಪೇಗೌಡ ಥೀಮ್ ಪಾರ್ಕ್
ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ:ಸಚಿವ ಮುನಿಯಪ್ಪ

ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.01: ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ದೈನಂದಿನ ಜೀವನದಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸುವ ಮೂಲಕ ಮುಂದಿನ ಪೀಳಿಗೆಗೆ ಕನ್ನಡ ಭಾಷೆಯನ್ನು ಪರಿಹರಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ 71 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೇರವೇರಿಸಿ ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಕರ್ನಾಟಕದಲ್ಲಿ ಗುಂಗರು, ಕದಂಬರು, ಚಾಲುಕ್ಯರು ರಾಷ್ಟ್ರಕೂಟರು, ಹೊಯ್ಸಳರು, ಮೈಸೂರು ಮಹಾರಾಜರು ಸೇರಿದಂತೆ ಅನೇಕ ರಾಜವಂಶಗಳು, ರಾಜರು ಆಳ್ವಿಕೆ ನಡೆಸಿದರು. ಕನ್ನಡ ರಾಜ್ಯ್ಯದ ಅಭಿವೃದ್ಧಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅಂತಹ ಮಹಾನ್ ನಾಯಕರ ಸ್ಮರಿಸುವ ದಿನ ಇದಾಗಿದೆ. 1956ರ ನವೆಂಬರ್ 1ರಂದು ವಿವಿಧ ಕನ್ನಡ ಭಾಷಿಕ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯ ಉದಯವಾಯಿತು. ನಂತರ 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ನೇತೃತ್ವದಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಈ ಐತಿಹಾಸಿಕ ದಿನ ಕನ್ನಡಿಗರ ಸ್ವಾಭಿಮಾನ ಮತ್ತು ಏಕತೆಯ ಸಂಕೇತವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈ ವರ್ಷದ 71ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಲನಚಿತ್ರ ಕ್ಷೇತ್ರದಲ್ಲಿ ಅಶೋಕ್, ಸಂಗೀತ ಕ್ಷೇತ್ರದಲ್ಲಿ ವಿ. ಮುರಳಿ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಕೆಂಪಣ್ಣ ಆಯ್ಕೆಯಾಗಿರುವುದಕ್ಕೆ ಅಭಿನಂದನೆಗಳು.
ನಮ್ಮ ಸರ್ಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 2,20,292 ಮಹಿಳೆಯರಿಗೆ ಮಾಸಿಕ 2,000 ರೂ.ನಂತೆ ಒಟ್ಟು 1,238.34 ಕೋಟಿ ರೂ. ನೇರವಾಗಿ ಜಮೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 3,39,080 ಕುಟುಂಬಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದ್ದು, 564 ಕೋಟಿ ರೂ. ಸಹಾಯಧನ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 2,25,633 ಬಿಪಿಎಲ್ ಕುಟುಂಬಗಳ ಫಲಾನುಭವಿಗಳಿಗೆ 10 ಕೆ.ಜಿ. ಅಕ್ಕಿ ಉಚಿತವಾಗಿ ವಿತರಿಸಲಾಗುತ್ತಿದೆ.
ಶಕ್ತಿ ಯೋಜನೆಯಡಿ 13.90 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದು, 310 ಕೋಟಿ ರೂ. ರಿಯಾಯಿತಿ ನೀಡಲಾಗಿದೆ. ಯುವನಿಧಿ ಯೋಜನೆಯಡಿ 4,956 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 4,101 ಅಭ್ಯರ್ಥಿಗಳಿಗೆ 122 ಕೋಟಿ ರೂ. ಅನುದಾನ ನೀಡಲಾಗಿದೆ.
ಜಿಲ್ಲೆಯಲ್ಲಿ 62,854 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ರೈತರಿಗೆ ಪರಿಹಾರ ನೀಡಲು 52.88 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ 1,192 ಗ್ರಾಮಗಳ ಪೈಕಿ 1,134 ಗ್ರಾಮಗಳಲ್ಲಿ ಕಾಮಗಾರಿ ಕೈಗೊಂಡು 845 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದರಿಂದ 1.84 ಲಕ್ಷ ಕುಟುಂಬಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ.
ದೇವನಹಳ್ಳಿ ಸಮೀಪ ಕನ್ನಡ ಭವನ ನಿರ್ಮಾಣಕ್ಕೆ 1.20 ಎಕರೆ ಜಾಗ ಗುರುತಿಸಲಾಗಿದ್ದು, 15 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಹೆಚ್ಚುವರಿಯಾಗಿ 7 ಕೋಟಿ ರೂ. ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಾಡಪ್ರಭು ಕೆಂಪೇಗೌಡರ ಮೂಲಸ್ಥಳವಾದ ದೇವನಹಳ್ಳಿಯ ಆವತಿ ಬಳಿ 10 ಎಕರೆ ಜಾಗದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಿಸಲು ಜಾಗ ಗುರುತಿಸಲಾಗಿದೆ.
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಜಿಲ್ಲೆಯ 32 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಗೆ ಆಯ್ಕೆ ಮಾಡಲಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೂ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಕನ್ನಡ ಭಾಷೆಯ ಬಳಕೆಯನ್ನು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ಕ್ಷೇತ್ರಗಳಲ್ಲಿಯೂ ವಿಸ್ತರಿಸಬೇಕು. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಸಂಕಲ್ಪದೊಂದಿಗೆ ಎಲ್ಲರೂ ಮುನ್ನಡೆಯಬೇಕು ಎಂಬ ಆಶಯದೊಂದಿಗೆ ರಾಜ್ಯೋತ್ಸವ ಸಂದೇಶವನ್ನು ಮುಕ್ತಾಯಗೊಳಿಸಿದರು.
ಈ ಸಂಧರ್ಭದಲ್ಲಿ ಪೊಲೀಸ್ ತುಕಡಿಗಳಿಂದ ಪಥ ಸಂಚಲನ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ 16 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕನ್ನಡ ಭಾಷೆ, ಸಂಸ್ಕೃತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ಮೂಡಿಬಂತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಸಿಇಒ ಡಾ ವಾಸಂತಿ ಅಮರ್, ಎಸ್ಪಿ ಚಂದ್ರಕಾಂತ್ ಎಂವಿ, ಎಡಿಸಿ ರಂಗನಾಥ್ , ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.










