ವಿಜಯ ದರ್ಪಣ ನ್ಯೂಸ್……
ಪ್ರಜಾ ಸೇವೆ ಆಂದೋಲನ ಸಭೆ| ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ
ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ನಮ್ಮ ಉದ್ದೇಶ: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.14:
ಜನಸಾಮಾನ್ಯರು, ಬಡವರು ರೈತರ ಸಮಸ್ಯೆ, ಅಹವಾಲು ಆಲಿಸಿ ಅವರಿಗೆ ತ್ವರಿತ ಪರಿಹಾರ ಒದಗಿಸುವುದು ನಮ್ಮ ಸರ್ಕಾರದ ಉದ್ದೇಶ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಹೊಸಕೋಟೆ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಹೊಸಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ದೊಡ್ಡಹುಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಇಂದು ನಡೆದ ಹೋಬಳಿ ಮಟ್ಟದ ‘ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ ಮಾತನಾಡಿದ ಅವರು ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಅನೇಕ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದಾರೆ. ರಾಜಕೀಯ ಎನ್ನುವುದು ಜನರ ಸೇವೆಗಾಗಿ ಎಂಬ ಗಾಂಧೀಜಿಯವರ ಆಶಯದಂತೆ ಜನರ ಭಾವನೆ, ಕಷ್ಟ ಹಾಗೂ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಸ್ಪಂದಿಸಬೇಕು. ಜನರ ಮತ ಪಡೆಯುವುದು ಎಷ್ಟು ಮುಖ್ಯವೋ, ಅವರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳನ್ನು ಆಲಿಸುವುದೂ ಅಷ್ಟೇ ಮುಖ್ಯ ಎಂದರು.
ಸಾಮಾನ್ಯ ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ರೂಪಿಸಿರುವ ಈ ಕಾರ್ಯಕ್ರಮದಡಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರ ಮನೆ ಬಾಗಿಲಿಗೆ ತೆರಳಿ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಒದಗಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಂದೇ ವೇದಿಕೆಗೆ ತಂದು ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ವಿಜಯಪುರದಲ್ಲಿ ಮೊದಲ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸುಮಾರು 3,600 ಅರ್ಜಿಗಳು ಸ್ವೀಕೃತವಾಗಿದ್ದು, ದೇವನಹಳ್ಳಿ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ 2,900 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಆಡಳಿತ ವ್ಯವಸ್ಥೆಯೇ ಜನರ ಮನೆ ಬಾಗಿಲಿಗೆ ತೆರಳಿದಾಗ ಜನರಿಗೆ ತಮ್ಮ ಚುನಾಯಿತ ಪ್ರತಿನಿಧಿಗಳು ನೆರವಿಗೆ ಬರುತ್ತಿದ್ದಾರೆ ಎಂಬ ವಿಶ್ವಾಸ ಮೂಡುತ್ತದೆ ಎಂದರು.
ಶಾಸಕ ಶರತ್ ಕುಮಾರ್ ಬಚ್ಚೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾರ್ವಜನಿಕರ ಮನೆ ಬಾಗಿಲಿಗೆ ನಮ್ಮ ಸರ್ಕಾರ ಹೋಗಿ ಅವರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಪ್ರಜಾ ಸೇವಾ ಆಂದೋಲನ ಸಭೆ ಆಯೋಜಿಸಲಾಗಿದೆ. ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ಈಗ ಎಲ್ಲಾ ತಾಲೂಕು, ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸುವರು.
ಇಂದು ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 499 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗಿದ್ದು, ಸ್ವೀಕೃತಗೊಂಡ ಎಲ್ಲಾ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳ ಪರಿಶೀಲನೆಗೆ ಕಳುಹಿಸಲಾಗಿದೆ. ನಿಯಮಾನುಸಾರ ಶೀಘ್ರವೇ ಎಲ್ಲರಿಗೂ ನ್ಯಾಯಯುತ ಪರಿಹಾರ ಹಾಗೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಎಸಿ ಮಂಜುನಾಥ್,ತಹಶೀಲ್ದಾರ್ ಶೀತಲ್ ಟಿ.ಎಸ್, ಇಒ ಮುನಿಯಪ್ಪ, ಡಿವೈಎಸ್ಪಿ ಮಲ್ಲೇಶ್, ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.








