ವಿಜಯ ದರ್ಪಣ ನ್ಯೂಸ್…….
ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲ : ಎಚ್.ಡಿ. ಪ್ರವೀಣ್ ಆಕ್ರೋಶ

ಮಡಿಕೇರಿ: ಗ್ರಾಮೀಣ ಹಾಗೂ ನಗರ ಪ್ರದೇಶದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಅನ್ಯಾಯ ಎಸಗುತ್ತಿದೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾ ದಳದ (ಜೆಡಿಎಸ್) ಜಿಲ್ಲಾಧ್ಯಕ್ಷ ಎಚ್.ಡಿ. ಪ್ರವೀಣ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕೋವಿಡ್ ಸಂಕಷ್ಟದ ಸಮಯದಿಂದ ಹಿಡಿದು ಪ್ರತಿಯೊಂದು ಆರೋಗ್ಯ ಅಭಿಯಾನದಲ್ಲೂ ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಆದರೆ, ಇಂದು ಅವರಿಗೆ ಸಿಗುತ್ತಿರುವ ಗೌರವಧನ ಜೀವನ ನಿರ್ವಹಣೆಗೆ ಯಾವುದಕ್ಕೂ ಸಾಲದಂತಾಗಿದೆ. ಚುನಾವಣೆಗೂ ಮುನ್ನ ಹಲವು ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್ ಸರ್ಕಾರ, ಅಧಿಕಾರಕ್ಕೆ ಬಂದ ನಂತರ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ,” ಎಂದು ಆರೋಪಿಸಿದ್ದಾರೆ.











