ವಿಜಯ ದರ್ಪಣ ನ್ಯೂಸ್……..
ದೇವನಹಳ್ಳಿ ತಹಶೀಲ್ದಾರ್ ಅನಿಲ್ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.28 :
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರ, ಅಧಿಕಾರಿಗಳೇ ಸಾರ್ವಜನಿಕರ ಬಳಿಗೆ ತೆರಳಿ ಕುಂದುಕೊರತೆಗಳನ್ನು ಆಲಿಸುವ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ಅನಿಲ್ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಪಂಚಾಯಿತಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.
ಸರ್ಕಾರದ ವಿವಿಧ ಯೋಜನೆಗಳು ಹಾಗೂ ಇಲಾಖೆಗಳ ಸೇವೆಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವುದು ಪ್ರಜಾ ಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಕುಡಿಯುವ ನೀರಿನ ಯೋಜನೆ, ರಸ್ತೆ ಅಭಿವೃದ್ಧಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಕೆರೆ ತುಂಬಿಸುವ ಯೋಜನೆ, ನೀರಾವರಿ, ದೇವಸ್ಥಾನ ಅಭಿವೃದ್ಧಿ ಹಾಗೂ ಗೃಹಜ್ಯೋತಿ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕಾರ್ಯ ಈ ಅಭಿಯಾನದ ಮೂಲಕ ನಡೆಯಲಿದೆ ಎಂದರು.
ಪ್ರತಿ ಶನಿವಾರ ಪ್ರಜಾ ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ತಾಲ್ಲೂಕು ಮಟ್ಟದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿಯೂ ಕಾರ್ಯಕ್ರಮ ಆಯೋಜಿಸಲಾಗುವುದು. ಸಾರ್ವಜನಿಕರು ಸಲ್ಲಿಸುವ ಅಹವಾಲುಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಧಿಕಾರಿಗಳು ಪ್ರಯತ್ನಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವತಿಯಿಂದ ರೈತರಿಗೆ ಅನುಕೂಲವಾಗುವ *‘ತೇಗಸಿರಿ’ ಯೋಜನೆಯ ಕುರಿತು ಮಾಹಿತಿ ನೀಡಲಾಯಿತು. ರಸ್ತೆ ಬದಿಗಳಲ್ಲಿ ತೇಗದ ಮರಗಳನ್ನು ನೆಡುವ ಮೂಲಕ ರೈತರಿಗೆ ಆದಾಯದ ಮೂಲ ಕಲ್ಪಿಸುವುದು ಯೋಜನೆಯ ಉದ್ದೇಶವಾಗಿದೆ. ನೆಡಲಾಗುವ ಮರಗಳಿಗೆ ಸಂಬಂಧಿಸಿದ ಮರಪಟ್ಟಿಯನ್ನು ಪಕ್ಕದ ಜಮೀನಿನ ಮಾಲೀಕರ ಹೆಸರಿಗೆ ನೀಡಲಾಗಿದ್ದು, ಮರಗಳು ಕಟಾವಣೆಗೆ ಬಂದಾಗ ಮರಪಟ್ಟಿ ಹೊಂದಿರುವ ರೈತರಿಗೆ ಶೇ.70ರಷ್ಟು ಹಾಗೂ ಸರ್ಕಾರಕ್ಕೆ ಶೇ.30ರಷ್ಟು ಪಾಲು ದೊರೆಯಲಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ವಿವರಿಸಿದರು. ಈ ಯೋಜನೆಯಲ್ಲಿ ಆಸಕ್ತಿ ಹೊಂದಿರುವವರು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಇಒ ಮುನಿರಾಜು, ಜಿಪಂ ಮಾಜಿ ಸದಸ್ಯ ಕೆ.ಸಿ ಮಂಜುನಾಥ್, ನಾಗೇಶ್, ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.








