--Ads--

ಕಾಫಿ ಎಸ್ಟೇಟ್ ಮಾಲೀಕನಿಂದ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ

On: November 28, 2026 6:18 PM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್……

ಕಾಫಿ ಎಸ್ಟೇಟ್ ಮಾಲೀಕನಿಂದ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ

 

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಫಿ ಎಸ್ಟೇಟ್ ಮಾಲೀಕನಿಂದ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಒಂದು ಕೈಯಲ್ಲಿ ಬಂದೂಕು, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಕಾರ್ಮಿಕರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳೆಯರು ಹಾಗೂ ಮಕ್ಕಳನ್ನೂ ಒಳಗೊಂಡಂತೆ ತಮಿಳುನಾಡು ಮೂಲದ ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಂಡು, ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಚಿಕ್ಕಮಗಳೂರು ತಾಲ್ಲೂಕಿನ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಸಗೂಡು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇಲ್ಲಿನ ಕಾಫಿ ಎಸ್ಟೇಟ್ ಮಾಲೀಕ ಭರತ್ ಹಾಗೂ ಸತ್ಯಕೀರ್ತಿ ವಿರುದ್ಧ ಕಾರ್ಮಿಕರ ಮೇಲೆ ಹಲ್ಲೆ, ಜೀವ ಬೆದರಿಕೆ ಸೇರಿದಂತೆ ಹಲವು ಗಂಭೀರ ಆರೋಪಗಳು ಕೇಳಿಬಂದಿವೆ. ವಿಶೇಷವಾಗಿ ಕಾರ್ಮಿಕ ಮಹಿಳೆ ಮೀನಾ ಅವರ ಮೇಲೆ ದೊಣ್ಣೆ ಹಾಗೂ ಪೈಪ್‌ನಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಮತ್ತಷ್ಟು ಗಂಭೀರ ಸ್ವರೂಪ ನೀಡಿದೆ.

ಸಂಬಳದ ವಿಚಾರಕ್ಕೆ ಗಲಾಟೆ?

ಸಂತ್ರಸ್ತೆ ಮೀನಾ ನೀಡಿರುವ ದೂರಿನ ಪ್ರಕಾರ, ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಸಂಬಳದ ಹಣದ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಸಾಲವಾಗಿ ನೀಡಿದ್ದ ಹಣವನ್ನು ಮರುಪಾವತಿಸಿ ಬೇರೆ ಕಡೆಗೆ ತೆರಳುವ ಕುರಿತು ಮಾತುಕತೆ ನಡೆಯುತ್ತಿದ್ದ ಸಂದರ್ಭದಲ್ಲಿ ಗಲಾಟೆ ಉಂಟಾಗಿದೆ ಎನ್ನಲಾಗಿದೆ. ಈ ವೇಳೆ ಎಸ್ಟೇಟ್ ಮಾಲೀಕ ಭರತ್ ಅನುಚಿತವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮೀನಾ ಆರೋಪಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡಿರುವ ಮೀನಾ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯ ವಾರ್ಡ್‌ನಲ್ಲಿಯೇ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ. ಎಸ್ಟೇಟ್ ಮಾಲೀಕ ಭರತ್ ಮನಬಂದಂತೆ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಹಲ್ಲೆಯ ಸಂದರ್ಭದಲ್ಲಿ ಕಿವಿಯಲ್ಲಿದ್ದ ಚಿನ್ನದ ಒಡವೆಯೂ ನಾಪತ್ತೆಯಾಗಿದೆ ಎಂದು ತಿಳಿಸಿ ದ್ದಾರೆ.

ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಾರ್ಮಿಕರ ಮೇಲೆ ಬಂದೂಕು ತೋರಿಸಿ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ವಿಡಿಯೋ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.

ಭರತ್-ಸತ್ಯಕೀರ್ತಿ ವಿರುದ್ಧ ಎಫ್‌ಐಆರ್

ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಂತ್ರಸ್ತೆ ಮೀನಾ ನೀಡಿದ ದೂರಿನ ಆಧಾರದ ಮೇಲೆ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಕಾಫಿ ಎಸ್ಟೇಟ್ ಮಾಲೀಕ ಭರತ್ ಹಾಗೂ ಸತ್ಯಕೀರ್ತಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ (ಃಓS) ಸೆಕ್ಷನ್ ೭೪, ೭೫(೧), ೧೧೮(೧), ೧೧೫(೨), ೩೫೨, ೩೫೧(೩) ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಗಳಾದ ಭರತ್ ಹಾಗೂ ಸತ್ಯಕೀರ್ತಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಅವರ ಪತ್ತೆ ಹಾಗೂ ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಜಿಲ್ಲಾಡಳಿತ ಮಧ್ಯಪ್ರವೇಶಕ್ಕೆ ಆಗ್ರಹ

ಇನ್ನು ಈ ಘಟನೆಯಿಂದ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಹೊರಜಿಲ್ಲೆ ಹಾಗೂ ಹೊರರಾಜ್ಯದ ವಲಸೆ ಕಾರ್ಮಿಕರ ಸುರಕ್ಷತೆಯ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ. ಉದ್ಯೋಗ ಅರಸಿ ಬರುವ ಕಾರ್ಮಿಕರಿಗೆ ಸೂಕ್ತ ವೇತನ, ಸುರಕ್ಷಿತ ಕೆಲಸದ ವಾತಾವರಣ ಹಾಗೂ ಗೌರವಯುತ ಬದುಕಿನ ಹಕ್ಕು ಕಲ್ಪಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕಾರ್ಮಿಕರ ಮೇಲೆ ದೌರ್ಜನ್ಯ ನಡೆದಿರುವ ಆರೋಪದ ಕುರಿತು ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ಕಾರ್ಯವೈಖರಿ ಬಗ್ಗೆಯೂ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಸಂತ್ರಸ್ತ ಮಹಿಳೆ ಮೀನಾ ಸೇರಿದಂತೆ ಹಲ್ಲೆಗೊಳಗಾದ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸಬೇಕು. ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ತಕ್ಷಣ ಮಧ್ಯಪ್ರವೇಶಿಸಿ ವಲಸೆ ಕಾರ್ಮಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ಒಟ್ಟಿನಲ್ಲಿ, ಕಾಫಿನಾಡಿನ ಕಾಫಿ ತೋಟಗಳಲ್ಲಿ ದುಡಿಯುವ ಕಾರ್ಮಿಕರ ಬದುಕು ಮತ್ತು ಸುರಕ್ಷತೆಯ ವಿಚಾರ ಈ ಘಟನೆಯಿಂದ ಮತ್ತೆ ಚರ್ಚೆಗೆ ಬಂದಿದೆ. ವೈರಲ್ ವಿಡಿಯೋದಲ್ಲಿನ ದೃಶ್ಯಗಳು ಹಾಗೂ ಸಂತ್ರಸ್ತೆಯ ದೂರಿನ ಆಧಾರದ ಮೇಲೆ ತನಿಖೆ ನಡೆಯುತ್ತಿದ್ದು, ಆರೋಪಿಗಳ ಬಂಧನದ ಬಳಿಕ ಘಟನೆಯ ಸಂಪೂರ್ಣ ಸತ್ಯಾಸತ್ಯತೆ ಹೊರಬರಬೇಕಿದೆ. ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.

WhatsApp

Join Now

Telegram

Join Now

Instagram

Join Now