--Ads--

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ

On: August 14, 2025 2:53 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,14 : ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ನಿಷೇಧಿಸಿದೆ.

ಸಾರ್ವಜನಿಕರು ಸಾಮಾನ್ಯವಾಗಿ ಪಿ.ಒ.ಪಿ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ,ಬಾವಿ, ಕಲ್ಯಾಣಿಗಳಲ್ಲಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ರೀತಿ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುತ್ತವೆ. ಪಿಒಪಿ ವಿಗ್ರಹಗಳಿಂದ ಭೌತಿಕ ಹಾಗೂ ರಾಸಾಯನಿಕವಾಗಿ ನೀರಿನ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ಆಗುವ ದುಷ್ಪರಿಣಾಮದಿಂದ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅದಲ್ಲದೆ ಅ ನೀರನ್ನು ಬಳಸುವುದರಿಂದ ಮನುಷ್ಯನ ಆರೋಗ್ಯದಲ್ಲಿ ಏರು-ಪೇರು ಉಂಟಾಗುತ್ತದೆ.

ಪಿಒಪಿ ವಿಗ್ರಹಗಳು ನೀರಿನಲ್ಲಿ ಕರಗುವುದಿಲ್ಲ ಮತ್ತು ನೀರಿನ ಮೂಲಗಳ ಆಮ್ಲೀಯತೆಯನ್ನು ಹೆಚ್ಚಿಸುವುದರಿಂದ ಜಲಚರಗಳಿಗೆ ಹಾನಿಕಾರಕವಾಗಿದೆ. ಜಲಮೂಲಗಳ ಮಾಲಿನ್ಯದಿಂದಾಗಿ ಇಡೀ ಪರಿಸರ ವ್ಯವಸ್ಥೆಯು ಅಸಮತೋಲನಗೊಳ್ಳುತ್ತದೆ. ಪ್ಲಾಸ್ಟರ್ ಅಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ ಕಾಯ್ದೆ ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ ಅಥವಾ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ,
ತದನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದು.

ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ,ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಮತ್ತು ಒಣಕಸವಾಗಿ ಪ್ರತ್ಯೇಕಿಸಬೇಕು.
ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಅಲಂಕಾರಕ್ಕೆ ಮತ್ತು ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು, ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಆಗಸ್ಟ್14: ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ.

ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಮತ್ತು ಬೆಳೆ ವಿಮಾ ಕಂತು ನೋಂದಾಯಿಸಿಕೊಳ್ಳಲು ಆಗಸ್ಟ್ 11 ಕೊನೆಯ ದಿನಾಂಕವಾಗಿತ್ತು ಪ್ರಸ್ತುತ ಆಗಸ್ಟ್ 30 ರವರೆಗೆ ವಿಸ್ತರಿಸಲಾಗಿದೆ.

ಜಿಲ್ಲೆಯಲ್ಲಿನ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ ಮತ್ತು ಮಾವುಗೆ ವಿಮೆ ಮಾಡಿಸಬಹುದಾಗಿದ್ದು, ಮಾವು ಬೆಳೆಗೆ ಪ್ರತಿ ಹೆಕ್ಟೇರಿಗೆ 80000 ವಿಮಾ ಮೊತ್ತ ಸಿಗಲಿದ್ದು, ರೈತರು ಶೇ 5 ರಂತೆ 4,000 ರೂಗಳು ಮಾತ್ರ ವಿಮೆ ಪಾವತಿ ಮಾಡಬೇಕು. ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರಿಗೆ 2.80.000 ರೂ ವಿಮಾ ಮೊತ್ತ ಸಿಗಲಿದ್ದು, ರೈತರು ಪ್ರತಿ ಹೆಕ್ಟೇರಿಗೆ ಶೇ 5 ರಂತೆ 14,000 ರೂಂ ವಿಮೆ ಪಾವತಿ ಮಾಡಬೇಕು.

ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ/ಕಂದಾಯರಶೀದಿ/ಖಾತೆ ಪುಸ್ತಕ/ ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸುವುದು. ವಿಮೆ ಮಾಡಿಸುವ ರೈತರು FRUITS ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ವಿನ್ಯಾಸ ಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಕಂಪನಿಯು ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ.

ಹೆಚ್ಚಿನ ಮಾಹಿತಿಗೆ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೇವನಹಳ್ಳಿ- 9480461234. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೊಡ್ಡಬಳ್ಳಾಪುರ-9482129648, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹೊಸಕೋಟೆ-9880210892, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ನೆಲಮಂಗಲ-9880461607 ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp

Join Now

Telegram

Join Now

Instagram

Join Now