ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು: ಸಂಸದ ಡಾ.ಕೆ. ಸುಧಾಕರ್

ವಿಜಯ ದರ್ಪಣ ನ್ಯೂಸ್…..

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು: ಸಂಸದ ಡಾ.ಕೆ. ಸುಧಾಕರ್

 

ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 2 :

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕಲೆ, ಸಂಗೀತ, ನೃತ್ಯ ವಿವಿಧ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉನ್ನತ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಗುರುತಿಕೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಾ.ಕೆ. ಸುಧಾಕರ್ ಅವರು ತಿಳಿಸಿದರು.

ಇಂದು ದೇವನಹಳ್ಳಿ ಟೌನ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025-26 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಬೇಕು. ನಮ್ಮ ಜಿಲ್ಲೆಗೆ ಕೀರ್ತಿ ತರುವಂತರಾಗಬೇಕು. ಪ್ರತಿಯೊಬ್ಬರಲ್ಲೂ ಪ್ರತಿಭೆ ಇದೆ. ಅವರಿಗೆ ಸೂಕ್ತ ವೇದಿಕೆ ದೊರೆತಾಗ ಅವರ ಪ್ರತಿಭೆ ಹೊರಹೊಮ್ಮುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ವೇದಿಕೆಯ ಮೆಟ್ಟಿಲೇರುವುದು ಮುಖ್ಯ. ಗೆದ್ದರೂ ಸೋತರು ಸಮಚಿತ್ತದಿಂದ ಸ್ವೀಕರಿಸಿ. ಸೋತಾಗ ಅನುಭವವು ಸಹ ಜೀವನದ ಪಾಠವಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಪಿಕೊಳ್ಳಬೇಕು. ಜೀವನದಲ್ಲಿ ಗುರಿಯ ಜೊತೆಗೆ ಪರಿಶ್ರಮ ಸೇರಿದಾಗ ಯಶಸ್ಸು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ. ರಾಜಣ್ಣ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಯು ಹೊರಬರಬೇಂಬ ದೃಷ್ಟಿಯಿಂದ ಎಸ್.ಎಂ ಕೃಷ್ಣ ಅವರು ಮುಖ್ಯ ಮಂತ್ರಿಯಾಗಿದ್ದಾಗ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಪ್ರಾರಂಭಿಸಿದರು. ಜೀವನದಲ್ಲಿ ಗುರಿ ಮುಖ್ಯ. ನಿಮಗೆ ಜಿಲ್ಲೆ, ರಾಜ್ಯ ಮಟ್ಟದ ಕಾರ್ಯಕ್ರಮ ದಲ್ಲಿ ಗೆಲ್ಲಬೇಕೆಂಬ ಗುರಿ ಇದೆ ಎಂದು ಹೇಳಿದರು.

ವಿವಿಧ ಸಂಸ್ಥೆಗಳು ಸಿ.ಎಸ್.ಆರ್ ಹಣದಿಂದ ಶಾಲೆಗಳನ್ನು ಕಟ್ಟುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಾಗಿದ್ದು ವಿದ್ಯಾರ್ಥಿಗಳು ಸಂಖ್ಯೆ ಹೆಚ್ಚಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ(ಅಭಿವೃದ್ಧಿ) ಹನುಮಂತರಾಯ, ಇಒ ಶ್ರೀನಾಥ್ ಗೌಡ, ಉಪನಿರ್ದೇಶಕ ಕಛೇರಿಯ ಶಿಕ್ಷಣಾಧಿಕಾರಿ ಹನುಮಾನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಎಂ, ಸ್ಥಳೀಯ ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು‌ ಉಪಸ್ಥಿತರಿದ್ದರು.