ವಿಜಯ ದರ್ಪಣ ನ್ಯೂಸ್…..
ಏ.06 ರಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣ: ಜಿಲ್ಲಾಧಿಕಾರಿ ಕೆಎನ್ ಅನುರಾಧ
ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಮಾ.18:
ದೇವನಹಳ್ಳಿಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಏಪ್ರಿಲ್ 06 ರಂದು ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ ಎಂದು
ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದರು.
ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಸವೇಶ್ವರ ಪುತ್ಥಳಿ ಕಾಮಗಾರಿ ಮುಗಿದಿದ್ದು ಏಪ್ರಿಲ್ 06 ರಂದು ಉದ್ಘಾಟನೆಗೆ ಸಿದ್ಧವಾಗಿದೆ, ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ಲೋಕಾರ್ಪಣೆಗೊಳ್ಳಲಿದೆ. ನಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಗಣ್ಯರು, ಮಠಾಧೀಶರು ಆಗಮಿಸಲಿದ್ದು ಕಾರ್ಯಕ್ರಮ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು ಎಂದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರಿಗೆ, ಜನಪ್ರತಿನಿಧಿಗಳಿಗೆ ತಲುಪಿಸಬೇಕು. ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಕಲಾತಂಡಗಳ ಮೆರುಗು, ಸಂಗೀತ ಕಾರ್ಯಕ್ರಮ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದರು. ವೇದಿಕೆ ಅಲಂಕಾರಕ್ಕೆ ತೋಟಗಾರಿಕೆ ಇಲಾಖೆ, ಉಪಹಾರ ವ್ಯವಸ್ಥೆಗೆ ಘಾಟಿಗೆ ಸೂಚಿಸಲಾಯಿತು. ಕಾರ್ಯಕ್ರಮಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಬಸವಣ್ಣ ಅವರ ಮಂಟಪ 28 ಅಡಿ. ಕಂಚಿನ ಪ್ರತಿಮೆ 5 ಅಡಿ ಉದ್ದವಾಗಿದ್ದು 450 ಕೆಜಿ ಕಂಚು ಬಳಕೆ ಮಾಡಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ಪ್ರತಿಮೆ ನಿರ್ಮಿಸಲಾಗಿದೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವ್ ಸುಲೋಚನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಅಶೋಕ್ ಕುಮಾರ್ ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಜಗಜ್ಯೋತಿ ಬಸವೇಶ್ವರರ ಪ್ರತಿಮೆ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ವಿ.ಮಂಜುನಾಥ್, ಅಧ್ಯಕ್ಷ ಎಸ್ ರಮೇಶ್ ಸೇರಿದಂತೆ ಸಮಿತಿ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.









