ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನು ಅರಿವು ಮತ್ತು ಜಾಗೃತಿ ಅಗತ್ಯ: ನ್ಯಾಯಮೂರ್ತಿ ಎಂ ಎಲ್ ರಘುನಾಥ.

ವಿಜಯ ದರ್ಪಣ ನ್ಯೂಸ್.                                ದೇವನಹಳ್ಳಿ ,                                               ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 12

ಸಮಾಜದಲ್ಲಿ  ಬಾಲ ಕಾರ್ಮಿಕ ಪದ್ಧತಿ ನಿಷೇಧದ ಕುರಿತು ಕಾನೂನು ಅರಿವು ಮತ್ತು ಜಾಗೃತಿ ಮೂಡಿಸಿ, ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸಿಕೊಟ್ಟರೆ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾದ ಎಂ.ಎಲ್ ರಘುನಾಥ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ದೇವನಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಡೆದ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2023” ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಡತನ, ಆರ್ಥಿಕ ಸಮಸ್ಯೆ ಕಾರಣದಿಂದಾಗಿ ಹಲವು ಕುಟುಂಬಗಳು ಮಕ್ಕಳನ್ನು ಶಾಲೆಗೆ ಕಳುಹಿಸಿ ಶುಲ್ಕ ಪಾವತಿಸಲು ಆಗದಂತಹ ಸ್ಥಿತಿಯಲ್ಲಿರುತ್ತಾರೆ. ಇಂತಹ ಸಂದರ್ಭಗಳಲ್ಲಿ ಮಕ್ಕಳು ಶಾಲೆಯನ್ನು ಬಿಟ್ಟು ಅಂಗಡಿ ಗ್ಯಾರೇಜ್‌ಗಳು ಕಾರ್ಖಾನೆಗಳನ್ನು ಹುಡುಕಿಕೊಂಡು ಕೆಲಸ ಮಾಡುತ್ತಾರೆ. ಇಂತಹ ಪರಿಸ್ಥಿತಿಯನ್ನು ತಪ್ಪಿಸಲು ಮಕ್ಕಳಿಗೆ ಉಚಿತ ಶಿಕ್ಷಣ ನೀಡಿದ್ದಲ್ಲಿ ಸ್ವಲ್ಪಮಟ್ಟಿಗಾದರೂ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬಹುದು. ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಾಣಿಜ್ಯ ಉದ್ಯಮಗಳಾಗಿ ಬೆಳೆಯುತ್ತಿವೆ. ಮಕ್ಕಳು ಪ್ರಾಥಮಿಕ ಶಿಕ್ಷಣ ಪಡೆಯಲು ಹೆಚ್ಚು ಹೆಚ್ಚು ಶುಲ್ಕವನ್ನು ಪಾವತಿ ಮಾಡಬೇಕು. ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದು ಮುಂದಿನ ಶಿಕ್ಷಣ ಪಡೆಯಲು ಶುಲ್ಕ ಪಾವತಿಸಲಾಗದೆ ಓದುವುದನ್ನು ನಿಲ್ಲಿಸುತ್ತಾರೆ.

ಇದನ್ನು ತಡೆಯುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಮತ್ತು ಶಿಕ್ಷಣವನ್ನು ನೀಡುವುದು ಸರ್ಕಾರದ ಬದ್ಧತೆ ಆಗಿರುತ್ತದೆ. ಆದ್ದರಿಂದ ಸರ್ಕಾರಿ ಶಾಲೆಗಳನ್ನು ಪ್ರೋತ್ಸಾಹಿಸಿ, ಬೆಂಬಲಿಸಿ ಉಚಿತವಾಗಿ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಿ ಎಂದರು.

ಇದಲ್ಲದೆ ಮಕ್ಕಳನ್ನು ಅಪಹರಣ ಮಾಡಿ ಭಿಕ್ಷಾಟನೆ,ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಇಂತಹ ಘಟನೆಗಳನ್ನು ಸಾರ್ವಜನಿಕರು ಗಮನಿಸಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕರೆ ಮಾಡಿ ಮಾಹಿತಿ ನೀಡಿ ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ತಿಳಿಸಿದರು.

ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪ.ಎನ್ ಅವರು ಮಾತನಾಡಿ ಮಕ್ಕಳನ್ನು ಚಿಕ್ಕವಯಸ್ಸಿಗೆ ಕೆಲಸಕ್ಕೆ ಹಾಕಿದರೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಬೆಳವಣಿಗೆ ಕುಂಠಿತವಾಗುತ್ತದೆ. ಪೋಷಕರು ಮಕ್ಕಳನ್ನು ವಯೋಸಹಜವಾಗಿ ಆಟವಾಡಲು ಶಿಕ್ಷಣ ಪಡೆಯಲು ಸಹಕರಿಸಬೇಕು. ಮಕ್ಕಳನ್ನು ಕಾರ್ಮಿಕರನ್ನಾಗಿ ದುಡಿಸಿಕೊಂಡರೆ ದೇಶದ ಬೆಳವಣಿಗೆಗೆ ಅಡಚಣೆಯಾಗುತ್ತದೆ ಬಡತನ ಹೆಚ್ಚಾಗುತ್ತದೆ ಆರ್ಥಿಕವಾಗಿ ಕುಂಠಿತವಾಗುತ್ತದೆ. ಮಕ್ಕಳಿಗೆ ಸರ್ಕಾರವು ಶಿಕ್ಷಣ ಹಕ್ಕು ಮಧ್ಯಾಹ್ನದ ಬಿಸಿಯೂಟ ಯೋಜನೆ, ಉಚಿತ ಸಮವಸ್ತ್ರ, ಪಠ್ಯಪುಸ್ತಕ ನೀಡುತ್ತಿದೆ. ಶಿಕ್ಷಣ ಪಡೆದುಕೊಳ್ಳಲು ಪ್ರೋತ್ಸಾಹಿಸುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯವಿದ್ದು ಇದನ್ನು ಪೋಷಕರು ಅರಿತು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕಲ್ಪಿಸಿಕೊಡಬೇಕು ಇದರಿಂದ ಬಾಲಕಾರ್ಮಿಕ ಪದ್ಧತಿಯನ್ನು ತಡೆಯಬಹುದು ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಸಾಲಿಯಾನ ಅವರು ಮಾತನಾಡಿ ಸಮಾಜದಲ್ಲಿ ಭಿಕ್ಷಾಟನೆ ಮಾಡುತ್ತಿರುವ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಕಳುಹಿಸಬೇಕು. ಅಂತವರನ್ನು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯನ್ನಾಗಿ ರೂಪಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಒಬ್ಬ ವಿದ್ಯಾರ್ಥಿ ಒಬ್ಬರನ್ನು ರಕ್ಷಿಸಿ, ಅದರಂತೆ ನಿಮ್ಮ ಮನೆಯ ಹತ್ತಿರ ಯಾರಾದರೂ ಶಾಲೆಗೆ ಹೋಗದೆ ಮನೆಯಲ್ಲಿ ಉಳಿದುಕೊಂಡಿದ್ದರೆ ಅಂತವರನ್ನು ಶಾಲೆಗೆ ಕರೆದುಕೊಂಡು ಬನ್ನಿ ಎಂದು ಮಕ್ಕಳನ್ನು ಪ್ರೇರೆಪಿಸಿದರು. ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಬಾಲ ಕಾರ್ಮಿಕ ಪದ್ಧತಿಯನ್ನು ತಡೆಯಲು ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ದೇವನಹಳ್ಳಿ ತಾಲೂಕು ಕಚೇರಿ ಆವರಣದಿಂದ ಡಾ. ಬಿ.ಆರ್.ಅಂಬೇಡ್ಕರ್ ಭವನದವರೆಗಿನ ಜಾಗೃತಿ ಮತ್ತು ಅರಿವು ಜಾಥಾ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾದ ಎಂ.ಎಲ್.ರಘುನಾಥ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಆರ್.ಲತಾ ಅವರು ವಹಿಸಿದ್ದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರಾಮು ಮಲ್ಲಯ್ಯ ಅವರು ಬಾಲಕಾರ್ಮಿಕ ವಿರೋಧಿ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ನಾಲ್ಕು ತಾಲ್ಲೂಕಿನ ವಿವಿಧ ಪ್ರೌಢ ಶಾಲೆಗಳಲ್ಲಿ ಬಾಲಕಾರ್ಮಿಕ ಪದ್ಧತಿ ಬಗ್ಗೆ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ನಂತರ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪ್ರಕರಣದಲ್ಲಿ ಪತ್ತೆಹಚ್ಚಿ ಮುಖ್ಯವಾಹಿನಿಗೆ ದಾಖಲು ಮಾಡಿ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.70% ರಷ್ಟು ಅಂಕಗಳನ್ನು ಪಡೆದ 03 ವಿದ್ಯಾರ್ಥಿನಿಯರಿಗೆ ರೂ 2000 ಗಳ ಚೆಕ್ ಹಾಗೂ ಅಭಿನಂದನಾ ಪತ್ರವನ್ನು ನೀಡಿ ಸನ್ಮಾನಿಸಲಾಯಿತು.

ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕರಾಗಿ ಪತ್ತೆಯಾಗಿ ಪುನರ್ವಸತಿಗೊಂಡ ಮಕ್ಕಳಿಗೆ ಶೈಕ್ಷಣಿಕ ಸಾಮಾಗ್ರಿ ಹಾಗೂ ಅವರ ಕುಟುಂಬ ವರ್ಗದವರಿಗೆ ಆಹಾರ ಕಿಟ್ ಗಳನ್ನು ನೀಡಲಾಯಿತು.

ಕಾರ್ಯ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಮಧುಸೂಧನ ಡಿ.ಕೆ., ಒಂದನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ನಾಯಕ್, ಎರಡನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಲೋಕೇಶ್.ಎಂ.ಜೆ, ಅಪರ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಸುಕನ್ಯಾ ಸಿ.ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರ್ಣಿತ್ ನೇಗಿ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ತೇಜಸ್ ಕುಮಾರ್.ಎನ್, ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಿ.ಎಲ್.ಎಸ್.ಪ್ರೇಮ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದಶಕ ಶ್ರೀಕಂಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಿ.ಕೆ.ವಿಜಯೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಜಿಲ್ಲಾಧಿಕಾರಿ ನಿರುಪಮ, ದೇವನಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ಶಿವರಾಜ್, ದೇವನಹಳ್ಳಿ ತಾಲ್ಲೂಕಿನ ವಕೀಲರ ಸಂಘದ ಅಧ್ಯಕ್ಷ ಎಮ್.ಆರ್.ಮುನಿರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.