ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ದತೆ.
ವಿಜಯ ದರ್ಪಣ ನ್ಯೂಸ್
ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 15:
ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯಲಿದ್ದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ “ಜೂನ್ 21 ರಂದು ನಡೆಯಲಿರುವ 09 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಸಂಬಂಧ ಅಗತ್ಯ ಸಿದ್ದತೆಗಳು ಕೈಗೊಳ್ಳಲು ಪೂರ್ವಭಾವಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಂಭತ್ತನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ದೇವನಹಳ್ಳಿ ಕ್ರೀಡಾಂಗಣದಲ್ಲಿ ಜೂನ್ 21 ರಂದು ಬೆಳಿಗ್ಗೆ 7.00 ಗಂಟೆಯಿಂದ 7:40 ಗಂಟೆಯವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳಿಂದ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ದೇವನಹಳ್ಳಿ ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಹಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ತುರ್ತು ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಚಿಕಿತ್ಸಾ ಅಂಬುಲೆನ್ಸ್ ವ್ಯವಸ್ಥೆ, ಸೇರಿದಂತೆ ಇನ್ನಿತರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರಲ್ಲದೆ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳು, ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
“ಯೋಗ ಫಾರ್ ವಸುದೈವ ಕುಟುಂಬಕಂ” ಹಾಗೂ “ಹರ್ ಆಂಗನ್ ಯೋಗ” ಎಂಬುದು 2023ರ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಘೋಷವಾಕ್ಯವಾಗಿದೆ ಎಂದು ಹೇಳಿದರಲ್ಲದೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ನಾಗರಾಜ, ಅಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಖುದ್ಸಿಯ ತಸ್‌ನೀಮ್.ಎಸ್.ಎ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.