ಉತ್ತಮ ಆರೋಗ್ಯಕ್ಕೆ ಯೋಗ ಸಹಕಾರಿ: ವರ್ಣಿತ್ ನೇಗಿ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ 
ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 21

 ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ ವತಿಯಿಂದ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯು ನಮ್ಮ ದೇಶದ ಸಾಂಸ್ಕೃತಿಕ ಸಂಪತ್ತನ್ನು ಸೂಚಿಸುತ್ತದೆ. ಆಧುನಿಕ ಯುಗದಲ್ಲಿ ಯೋಗಾಭ್ಯಾಸ ಅತ್ಯವಶ್ಯಕವಾಗಿದೆ. ಯೋಗ ಮಾಡುವುದರಿಂದ ದೈಹಿಕವಾಗಿ ಆಗುವ ಲಾಭವನ್ನು ತಂದೆ-ತಾಯಿಗೆ ತಿಳಿಸಿರಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿ, ಪ್ರತಿಯೊಬ್ಬರು ಯೋಗಾಭ್ಯಾಸ ಮಾಡುವುದನ್ನು ದಿನನಿತ್ಯದ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಯೋಗ ತರಬೇತುದಾರರ ಮಾರ್ಗದರ್ಶನದಲ್ಲಿ 40 ನಿಮಿಷಗಳ ಯೋಗಾಭ್ಯಾಸ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ಅಭಿನಂದನಾ ಪತ್ರ ಹಾಗೂ ಆಯುಷ್ ಇಲಾಖೆಯ ಆರೋಗ್ಯ ಪುಸ್ತಕವನ್ನು ನೀಡಲಾಯಿತು.
ಆಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ. ಖುದ್ಸಿಯ ತಸನೀಮ್ ಎಸ್. ಎ, ಅಧಿಕಾರಿ ನಿರ್ಮಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಪುರಸಭೆ ಮುಖ್ಯಾಧಿಕಾರಿ ದೊಡ್ಡ ಮಲ್ಲಯ್ಯ, ದೈಹಿಕ ಶಿಕ್ಷಣಾಧಿಕಾರಿ ಗಾಯಿತ್ರಿದೇವಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.