ವಿಜಯ ದರ್ಪಣ ನ್ಯೂಸ್….
ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ಮಾತ್ರ ತಲುಪುವಂತೆ ನೋಡಿಕೊಳ್ಳಿ: ತಾಲ್ಲೂಕು ಪಂಚಾಯಿತಿ ಇಓ

ಶಿಡ್ಲಘಟ್ಟ : ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಸಮಗ್ರ ಪರಿಷ್ಕರಣೆ ಹಾಗೂ ಅನರ್ಹರು ಸೌಲಭ್ಯ ಪಡೆಯುತ್ತಿದ್ದರೆ ಅದನ್ನು ತಡೆಗಟ್ಟಿ, ಕೇವಲ ಅರ್ಹರಿಗೆ ಮಾತ್ರ ಯೋಜನೆಗಳನ್ನು ತಲುಪಿಸುವ ಕುರಿತು ಸಭೆಯಲ್ಲಿತಾಲ್ಲೂಕು ಪಂಚಾಯತಿ ಇಓ ಆರ್.ಹೇಮಾವತಿ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿ ಮತ್ತು ಸಮನ್ವಯತೆ ಪ್ರಮುಖ ಪಾತ್ರ ವಹಿಸುತ್ತದೆ ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಉತ್ತಮ ಫಲಿತಾಂಶ ಸಾಧಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಸವಲತ್ತುಗಳು ನೈಜ ಫಲಾನುಭವಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತಷ್ಟು ದಕ್ಷತೆ ಹಾಗು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಜಿಲ್ಲಾ ಹಾಗೂ ತಾಲ್ಲೂಕು ಮಾರ್ಗದಲ್ಲಿ ಸಂಚರಿಸುವ ಬಸ್‌ಗಳು ನಿಗದಿತ ಸಮಯಕ್ಕೆ ಸರಿಯಾಗಿ ಸಂಚಾರ ಮಾಡಬೇಕು ಎರಡು ಬಸ್‌ಗಳು ಒಂದೇ ಸಮಯಕ್ಕೇ ಬರುವಂತಹ ಬಸ್ ಗಳು ಬದಲಾವಣೆ ಮಾಡಿ ನಿತ್ಯ ಓಡಾಡುವ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ನುಡಿದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ಮುನಿಯಪ್ಪ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಆರ್ಥಿಕ ಮಟ್ಟ ಹಾಗು ಅವರ ಜೀವನ ಮಟ್ಟವನ್ನು ಉತ್ತಮ ರೀತಿಯಲ್ಲಿ ರೂಪುಗೊಳಿಸುವಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸಿಡಿಪಿಓ ವಿದ್ಯಾ ವಸ್ತ್ರದ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು , ಬೆಸ್ಕಾಂ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಕೆಎಸ್‌ಆರ್‌ಟಿಸಿ ಹಾಗು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.









