ವಿಜಯ ದರ್ಪಣ ನ್ಯೂಸ್…
ಪಲ್ಸ್ ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜೂನ್. 03
ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 01 ರವರೆಗೆ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ‘ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
5 ವರ್ಷದೊಳಗಿನ ಯಾವುದೇ ಮಕ್ಕಳು ಪಲ್ಸ್ ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಎಲ್ಲಾ ಮಕ್ಕಳಿಗೂ ತಪ್ಪದೇ ಲಸಿಕೆ ಹಾಕಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಆಶಾ, ಅಂಗನವಾಡಿ ಆರೋಗ್ಯಧಿಕಾರಿಗಳು ಪಲ್ಸ್ ಪೋಲಿಯೋ ಲಸಿಕೆ ಬಗ್ಗೆ ಅರಿವು ಮೂಡಿಸಿ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಪೋಲಿಯೋ ಲಸಿಕೆ ಅಭಿಯಾನದ ಕುರಿತು ಧ್ವನಿವರ್ಧಕ ಮೂಲಕ ವ್ಯಾಪಕ ಜಾಗೃತಿ ಮೂಡಿಸಬೇಕು. ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳ ಸಹಕಾರ ಪಡೆದುಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್ಗಳಲ್ಲಿ ಹಾಗೂ ಆಯ್ದ ಶಾಲಾ, ಅಂಗನವಾಡಿ ಕೇಂದ್ರಗಳು, ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಮಾರುಕಟ್ಟೆ, ರಸ್ತೆ ಟೋಲ್ ಗೇಟ್ಗಳಲ್ಲಿ ಪೊಲಿಯೋ ಬೂತ್ ಗಳನ್ನು ತೆರೆಯಲಾಗುತ್ತದೆ ಎಂದರು.
*ಗರ್ಭಿಣಿಯರಿಗೆ ಸೂಕ್ತ ಲಸಿಕೆ ಸಿಗಲಿ:* ಜಿಲ್ಲೆಯಲ್ಲಿ ಗರ್ಭಿಣಿ, ಬಾಣಂತಿಯರಿಗೆ ಗರ್ಭಾವಸ್ಥೆಯಿಂದ ಹೆರಿಗೆ ಆಗುವ ವರೆಗೂ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಹಾಗೂ ಸೂಕ್ತ ಲಸಿಕೆಗಳು ತಪ್ಪದೇ ನೀಡಬೇಕು. ಹೆರಿಗೆ ನಂತರದಲ್ಲಿ ತಾಯಿ ಮಗುವಿಗೆ ಒಳ್ಳೆಯ ಆರೈಕೆ ಸಿಗುವಂತಾಗಬೇಕು.
*ತಾಯಿ ಹಾಗೂ ಶಿಶು ಮರಣ ತಡೆಯಿರಿ:*
ಜಿಲ್ಲೆಯಲ್ಲಿ ಹೆರಿಗೆ ಸಮಯದಲ್ಲಿ ಯಾವುದೇ ಬಾಣಂತಿಯರು ಹಾಗೂ ಶಿಶು ಮರಣ ಸಂಭವಿಸದಂತೆ ಅಗತ್ಯ ವೈದ್ಯಕೀಯ ಸೇವೆ ಸಿಗಬೇಕು. ಹೆರಿಗೆಗೆ ಬರುವ ಗರ್ಭಿಣಿಯರಿಗೆ ಸುಖಾಸುಮ್ಮನೆ ಬೇರೆ ಆಸ್ಪತ್ರೆಗೆ ಕಳುಹಿಸಿದರೆ ಸಂಬಂಧಪಟ್ಟ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದರು.
*ಹೆಚ್.ಪಿ.ವಿ ಲಸಿಕೆ ಅರಿವು ಹೆಚ್ಚಿಸಿ:*
ಹೆಚ್ಪಿವಿ ಲಸಿಕೆಯು ಹೆಣ್ಮಕ್ಕಳಲ್ಲಿ ಗರ್ಭಕಂಠದ ಕ್ಯಾನ್ಸರ್ ಬರದಂತೆ ರಕ್ಷಣೆ ನೀಡುತ್ತದೆ. ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿನ ಹೆಣ್ಮಕ್ಕಳಲ್ಲಿ ಲಸಿಕೆ ಕುರಿತು ಹೆಚ್ಚಿನ ಅರಿವು ಮೂಡಿಸಿ, ಲಸಿಕೆ ಹಾಕಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
*ಶಾಲಾ-ಕಾಲೇಜುಗಳ ಸುತ್ತಮುತ್ತ ತಂಬಾಕು ಉತ್ಪನ್ನ ನಿಷೇಧ:*
ಶಾಲಾ-ಕಾಲೇಜುಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದನ್ನು ತಡೆಗಟ್ಟಬೇಕು. ಶಾಲೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿಲ್ಲ. ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದು ಕಂಡುಬಂದರೆ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ. ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಕಡ್ಡಾಯವಾಗಿ ಮೂರು ತಿಂಗಳಗೊಮ್ಮೆ ಆಯಾ ತಾಲ್ಲೂಕಿನ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಅಧಿಕಾರಿ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಾಬಳೆ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಹೇಮಾವತಿ, ತಾಲ್ಲೂಕು ಆರೋಗ್ಯಾಧಿಕಾರಿಗಳು, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.









