ವಿಜಯ ದರ್ಪಣ ನ್ಯೂಸ್…..
ಜೂ.27 ಕ್ಕೆ ಕೆಂಪೇಗೌಡ ಥೀಮ್ ಪಾರ್ಕ್ ಲೋಕಾರ್ಪಣೆ: ಸಚಿವ ಕೆ.ಹೆಚ್ ಮುನಿಯಪ್ಪ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜೂನ್ 19 :
ಜೂನ್ 27 ಕ್ಕೆ ನಾಡಪ್ರಭು ಕೆಂಪೇಗೌಡರ ಜಯಂತಿ ದಿನದಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ಕೆಂಪೇಗೌಡ ಥೀಮ್ ಪಾರ್ಕ್ ಅನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಭವ್ಯ ಕಂಚಿನ ಪ್ರತಿಮೆ ಬಳಿ ಅಂದಾಜು 20 ಕೋಟಿ ರೂ.ಗಳ ವೆಚ್ಚದಲ್ಲಿ ಕೆಂಪೇಗೌಡ ತೀಮ್ ಪಾರ್ಕ್ ನಿರ್ಮಿಸಲಾಗಿದ್ದು ಜೂನ್ 27 ರಂದು ಮುಖ್ಯಮಂತ್ರಿಗಳು ಬೆಳಿಗ್ಗೆ 8.30 ಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.
ರಾಜ್ಯ ಮಟ್ಟದ ಕಾರ್ಯಕ್ರಮವು ಬೆಂಗಳೂರು ನಗರದ ಕೆಂಗೇರಿಯ ಕೆಂಪೇಗೌಡ ಬಡಾವಣೆಯಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಕೆಂಪೇಗೌಡರ ವಂಶಸ್ಥರು ನೆಲೆಸಿದ್ದಂತ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಪ್ರತಿ ವರ್ಷದಂತೆ ಈ ವರ್ಷವೂ ಜ್ಯೋತಿ ಹೊರಡಲಿದೆ ಎಂದು ಹೇಳಿದರು.
ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಕನಿಷ್ಠ 5000 ಜನ ಹೊರಡಬೇಕಿದೆ. ಆವತಿಯಿಂದ ಜ್ಯೋತಿ, ಜೊತೆಗೆ ಏರ್ಪೋರ್ಟ್ ಲಿ ಸಿಎಂ ಕಾರ್ಯಕ್ರಮ, ರಾಜ್ಯ ಮಟ್ಟದ ಕಾರ್ಯಕ್ರಮ ಒಂದೇ ದಿನ ಇರುವುದರಿಂದ ಏಕಕಾಲದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜನರು ಭಾಗಿಯಾಗಲು ಸಾಧ್ಯವಾಗುವುದಿಲ್ಲ. ಹಾಗಾಗಿ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಬೇರೊಂದು ದಿನ ಆಯೋಜಿಸಲು ತೀರ್ಮಾನಿಸಲಾಗಿದ್ದು ಸಮುದಾಯದ ಮುಖಂಡರ ಜೊತೆ ಚರ್ಚಿಸಿ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.
ಜೂನ್ 27 ರಂದು ಜಿಲ್ಲೆಯಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿಗೆ ಬೆಳಗ್ಗೆ 7.30 ಕ್ಕೆ ಮಾಲಾರ್ಪಣೆ ಮಾಡಲಾಗುವುದು, ನಂತರ ಬೆಳಗ್ಗೆ 08 ಗಂಟೆಗೆ ಆವತಿಯಲ್ಲಿ ಜ್ಯೋತಿ ಹೊರಡಲು ಚಾಲನೆ ನೀಡಲಾಗುವುದು. ಬೆಳಗ್ಗೆ 8.30 ಕ್ಕೆ ಏರ್ಪೋರ್ಟ್ ಲಿ ಕೆಂಪೇಗೌಡ ಥೀಮ್ ಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದ್ದು ಅಲ್ಲಿಂದ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಹೊರಡಲಿದ್ದೇವೆ ಎಂದರು.
ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಹೊರಡಲು ಜಿಲ್ಲೆಯ ನಾನಾ ಭಾಗಗಳಿಂದ ಬೆಳೆಗ್ಗೆ 07 ಗಂಟೆಗೆ ಬಸ್ ವ್ಯವಸ್ಥೆ ಮಾಡಲಾಗುವುದು, ಜೊತೆಗೆ ಉಪಹಾರ ಇರಲಿದೆ. ಜಿಲ್ಲೆಯ ಎಲ್ಲಾ ಸಂಘಟನೆಗಳ ಮುಖಂಡರು, ಸಮುದಾಯ ಮುಖಂಡರು, ಸಾರ್ವಜನಿಕರು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಸಚಿವರು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಸಿಇಒ ಡಾ. ವಾಸಂತಿ ಅಮರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು ಉಪಸ್ಥಿತರಿದ್ದರು.
ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ.19:
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ, ಬೆಂಗಳೂರು ಗ್ರಾಮಾಂತರ ಇವರ ಇವರ ಸಂಯುಕ್ತ ಆಶ್ರಯದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21 ರಂದು ದೇವನಹಳ್ಳಿ ಟಾನ್ ಕ್ರೀಡಾಂಗಣದಲ್ಲಿ ಬೆಳಗ್ಗೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ. ಹೆಚ್ ಮುನಿಯಪ್ಪ ಅವರು ಯೋಗ ದಿನದ ಅಧ್ಯಕ್ಷತೆ ವಹಿಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು. ಟಿ ಖಾದರ್, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ, 5ನೇ ಹಣಕಾಸು ಅಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ. ಸುಧಾಕರ್, ವಿಧಾನ ಪರಿಷತ್ ಸದಸ್ಯರಾದ ಎನ್. ರವಿ, ಪುಟ್ಟಣ್ಣ, ನೆಲಮಂಗಲ ಶಾಸಕ ಶ್ರೀನಿವಾಸ್, ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ವಿಧಾನ ಪರಿಷತ್ ಸದಸ್ಯರಾದ ನಾಗರಾಜು ಎಂ.ಟಿ.ಬಿ, ರಾಮೋಜಿ ಗೌಡ, ಆರ್ಥಿಕ ಇಲಾಖೆ (ಆಯವ್ಯಯ & ಸಂಪನ್ಮೂಲ) ಆಡಳಿತಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ ಜಾಫರ್, ಆಯುಷ್ ಇಲಾಖೆ ಆಯುಕ್ತ ಸುನೀಲ್ ಪಂವಾರ್, ಜಿಲ್ಲಾಧಿಕಾರಿ ಕೆ. ಎನ್. ಅನುರಾಧ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತಿ ಅಮರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಎಂ. ವಿ, ಜಿಲ್ಲಾ ಆಯುಷ್ ಅಧಿಕಾರಿ ಕೆ.ಟಿ ಅಶ್ವಿನಿ, ಜಿಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ನಾಮ ನಿರ್ದೇಶಿತ ಸದಸ್ಯರು ಪತ್ರಿಕಾ ಮತ್ತು ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿರಲಿದ್ದಾರೆ.











