ವಿಜಯ ದರ್ಪಣ ನ್ಯೂಸ್….
ತಾವರೆಕೆರೆ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ತಾವರೆಕೆರೆ: ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಹಾಗೂ ತಾವರೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾವರೆಕೆರೆ ಗ್ರಾಮಕ್ಕೆ ಸೇರಿದಂತ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಒಕ್ಕೂಟದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಆವರಣ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿಗಂಗಯ್ಯ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪನಮನದ ಮೂಲಕ ಗೌರವ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ನೆರೆದಿದ್ದವರು ರಾಷ್ಟ್ರಗೀತೆಯನ್ನು ಹಾಡುವ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿಗಂಗಯ್ಯ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಹೋರಾಟ ನಡೆಸಿದ್ದಾರೆ. ಅವರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಹೀಗಾಗಿ ಸ್ವಾತಂತ್ರ್ಯದ ಮಹತ್ವವನ್ನು ಅರಿತು, ದೇಶದ ಏಕತೆ, ಅಖಂಡತೆ ಮತ್ತು ಸೌಹಾರ್ದತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಟಿ.ಎಸ್. ರಾಜಶೇಖರ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ, ದೇಶದ ಅಭಿವೃದ್ಧಿ ಹಾಗೂ ಸಮಾಜದ ಒಳಿತಿಗಾಗಿ ನಮ್ಮ ಕರ್ತವ್ಯವನ್ನು ನೆನಪಿಸಿಕೊಳ್ಳುವ ದಿನವಾಗಬೇಕು ಎಂದು ಹೇಳಿದರು. ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಯುವಜನತೆ ಮೈಗೂಡಿಸಿಕೊಂಡು ಶಿಕ್ಷಣ, ಶಿಸ್ತು, ಸಾಮಾಜಿಕ ಸೇವೆ ಮತ್ತು ದೇಶಪ್ರೇಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು. ಅದೇ ರೀತಿ ಪ್ರತಿ ವರ್ಷದಂತೆ ಈ ವರ್ಷವೂ 10ನೇ ತರಗತಿ ಹಾಗೂ 7ನೇ ತರಗತಿಯಲ್ಲಿ ಪ್ರಥಮ ದ್ವಿತೀಯ ತೃತೀಯ ಸ್ಥಾನ ಪಡೆದಂತಹ ಉತ್ತಮ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಉಡುಗೊರೆಯೂ ಸಹ ನೀಡಿ ಮುಂದಿನ ವರ್ಷವೂ ಇದೇ ರೀತಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಇನ್ನೂ ಉತ್ತಮ ಹುಡುಗರೇ ಹಾಗೂ ಶಾಲೆಗೆ ಅಗತ್ಯವಿರುವ ಸಹಾಯವನ್ನು ಮಾಡಲು ಸದಾ ಸಿದ್ದ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ರವಿಕುಮಾರ್, ಬಸವ ಪ್ರಕಾಶ್, ರೂಪ ನಾಗೇಶ್, ಪವಿತ್ರ ಮಂಜುನಾಥ್ ಕರ ವಸೂಲಿಗಾರ ರಾಜಣ್ಣ, ಬಚ್ಚೇಗೌಡ, ಮೀನಾಕ್ಷಿ, ನ್ಯಾನಮೂರ್ತಿ, ಬಸವ ಸಮಿತಿಯ ವೀರಭದ್ರ, ವಿಜಿ ಕುಮಾರ್, ಹಿರಿಯ ಪತ್ರಕರ್ತರಾದ ಟಿ ನಾಗರಾಜ್, ಶಾಲಾ ಮುಖ್ಯ ಶಿಕ್ಷಕರಾದ ಗುಲ್ಬದಿನ್ ತಾರಾ, ಹಾಗೂ ಶಿಕ್ಷಕರಾದ ಪ್ರವೀಣ್ ಕುಮಾರ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಎಚ್ಎನ್ ಮಂಜುನಾಥ್ ಹಾಗೂ ಸಹ ಶಿಕ್ಷಕರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.











