ವಿಜಯ ದರ್ಪಣ ನ್ಯೂಸ್……..
ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಎಡಿಸಿ ರಂಗನಾಥ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.13 :
ನವೆಂಬರ್ 27 ರಂದು ನಡೆಯಲಿರುವ ಕನಕದಾಸ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಂಗನಾಥ್ ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕನಕದಾಸ ಜಯಂತಿ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನಕದಾಸ ಅವರ ಜಯಂತಿಯನ್ನು ನವೆಂಬರ್ 27 ರಂದು ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಆಚರಿಸಲಾಗುತ್ತಿದೆ. ಬೆಳಗ್ಗೆ 9.00 ಗಂಟೆಗೆ ದೇವನಹಳ್ಳಿ ಟೌನ್ ನಲ್ಲಿರುವ ಕನಕ ವೃತ್ತದಿಂದ ಅಂಬೇಡ್ಕರ್ ಭವನದವರೆಗೆ ಕನಕದಾಸರ ಭಾವಚಿತ್ರ ರಥಯಾತ್ರೆ ಮೆರವಣಿಗೆ ಹೊರಡಲಿದೆ. ನಂತರ ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಗಣ್ಯರ ಭಾಷಣ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಉಪನ್ಯಾಸವಿರಲಿದೆ.
ತಾಲ್ಲೂಕು ಮಟ್ಟದಲ್ಲಿ ಕನಕದಾಸ ಜಯಂತಿ ಆಚರಿಸಲು ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ವಹಿಸಿ ಎಂದರಲ್ಲದೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಿಸಿ ಎಲ್ಲಾ ಗಣ್ಯರನ್ನು ಆಹ್ವಾನಿಸಬೇಕು. ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮಕ್ಕೆ ಸಾರ್ವಜನಿಕರು, ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕೋರಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕಲ್ಪನ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.










