ವಿಜಯ ದರ್ಪಣ ನ್ಯೂಸ್…….
ಸರ್ಕಾರಿ ಉರ್ದು–ಇಂಗ್ಲಿಷ್ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ ಸಂಭ್ರಮ: ವಿದ್ಯಾರ್ಥಿಗಳ ಪ್ರತಿಭಾ ಅನಾವರಣ

ವಿಜಯಪುರ, ದೇವನಹಳ್ಳಿ ತಾಲ್ಲೂಕು : ಪಟ್ಟಣದ ಗುರುಪ್ಪನ ಮಠ ಹಾಗೂ ಖುಬಾ ಮಸೀದಿಯ ಮುಂಭಾಗದಲ್ಲಿರುವ ಸರ್ಕಾರಿ ಉರ್ದು–ಇಂಗ್ಲಿಷ್ (ದ್ವಿಭಾಷಾ) ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉರ್ದು ಸಿಆರ್ಸಿ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕುರಾನ್ ಪಠಣ, ಹಮ್ದ್, ನಾತ್, ಚಿತ್ರಕಲೆ, ಕವನ ವಾಚನ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮ ಕಲಾ ನೈಪುಣ್ಯತೆ ಹಾಗೂ ಪ್ರತಿಭೆಯನ್ನು ಅತ್ಯದ್ಭುತವಾಗಿ ಪ್ರದರ್ಶಿಸಿ ಗಮನ ಸೆಳೆದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳೊಂದಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಉತ್ತಮ ವೇದಿಕೆ: ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಅಬ್ದುಲ್ ಮುಯೀದ್, “ಪ್ರತಿಭಾ ಕಾರಂಜಿಯoತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವುದರ ಜೊತೆಗೆ ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಲು ಅತ್ಯುತ್ತಮ ವೇದಿಕೆಯಾಗಿವೆ. ಕೇವಲ ಪಠ್ಯ ಶಿಕ್ಷಣವಷ್ಟೇ ಅಲ್ಲದೆ, ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅತ್ಯಗತ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಮತ್ತಷ್ಟು ಬೆಳೆಸಿಕೊಂಡು ಪ್ರತಿಯೊಂದು ಕ್ಷೇತ್ರದಲ್ಲೂ ಉನ್ನತ ಸಾಧನೆ ಮಾಡಬೇಕು” ಎಂದು ಕರೆ ನೀಡಿದರು.
ಸೃಜನಾತ್ಮಕ ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ:
ಸಿಆರ್ಪಿ ಕೃಷ್ಣ ರಾಮ್ ಮಾತನಾಡಿ, “ಇಂತಹ ಸ್ಪರ್ಧಾತ್ಮಕ ಕಾರ್ಯಕ್ರಮಗಳು ಮಕ್ಕಳ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸೃಜನಾತ್ಮಕ ಪ್ರತಿಭೆಗಳನ್ನು ಪೋಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ಹಿಂಜರಿಕೆಯನ್ನು ಬಿಟ್ಟು ವಿವಿಧ ಚಟುವಟಿಕೆಗಳಲ್ಲಿ ಹೆಚ್ಚಿನ ಉತ್ಸಾಹದಿಂದ ಪಾಲ್ಗೊಳ್ಳಬೇಕು” ಎಂದು ಕಿವಿಮಾತು ಹೇಳಿದರು.
ಗಣ್ಯರ ಉಪಸ್ಥಿತಿ: ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶಮ್ಸಿಯಾ ಬೇಗಂ, ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ಶಿಕ್ಷಕ ವೃಂದ, ಎಸ್ಡಿಎಂಸಿ ಸದಸ್ಯರು ಹಾಫಿಜಾ, ಅತೀಫಾ, ಕೌಸರ್, ಬಾಬಾಜಾನ್, ಅಬ್ರಾರ್, ನಯಾಜ್, ನಿಸಾರ್, ಮುದಸ್ಸರ್ ಸೇರಿದಂತೆ ಪೋಷಕರು ಮತ್ತು ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










