ವಿಜಯ ದರ್ಪಣ ನ್ಯೂಸ್……
ಕಾಡಾನೆಗಳ ಸ್ಥಳಾಂತರ ಖಂಡಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಹಾಸನ ಜಿಲ್ಲೆಯಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಮುಂದಾಗಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಆಜಾದ್ ವೃತ್ತದಲ್ಲಿ ರೈತ ಸಂಘದ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಯಾವುದೇ ಕಾರಣಕ್ಕೂ ಹಾಸನ ಜಿಲ್ಲೆಯ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಗೆ ಸ್ಥಳಾಂತರಿಸಬಾರದು ಎಂದು ಆಗ್ರಹಿಸಿದರು.
ಈಗಾಗಲೇ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬೆಳೆ ನಷ್ಟ, ಆಸ್ತಿ ಹಾನಿ ಹಾಗೂ ಜೀವಭಯದ ನಡುವೆ ಜೀವನ ಸಾಗಿಸುತ್ತಿರುವ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಬದಲು, ಮತ್ತಷ್ಟು ಆನೆಗಳನ್ನು ಜಿಲ್ಲೆಗೆ ಸ್ಥಳಾಂತರಿಸುವ ಪ್ರಯತ್ನ ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರೈತ ಸಂಘದ ಮುಖಂಡ ಸೋಮೇಗೌಡ, ರೈತರ ಸಂಕಷ್ಟವನ್ನು ಅರ್ಥಮಾಡಿಕೊಳ್ಳದೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾಡಾನೆಗಳ ಸ್ಥಳಾಂತರದ ನಿರ್ಧಾರ ಕೈಗೊಳ್ಳುತ್ತಿರುವುದು ಖಂಡನೀಯ. ಹಾಸನ ಜಿಲ್ಲೆಯ ಆನೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನೆಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ರೈತರ ಮೇಲೆ ಮತ್ತೊಂದು ಸಮಸ್ಯೆಯನ್ನು ಹೇರುವುದು ಸರಿಯಲ್ಲ. ರೈತರ ಬದುಕು ಮತ್ತು ಕೃಷಿಯನ್ನು ರಕ್ಷಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಡಾನೆಗಳ ಹಾವಳಿಯಿಂದ ರೈತರು ಅನುಭವಿಸುತ್ತಿರುವ ಸಂಕಷ್ಟಕ್ಕೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ನೀಡುತ್ತಿರುವ ಭರವಸೆಗಳು ಪ್ರಯೋಜನಕ್ಕೆ ಬರುತ್ತಿಲ್ಲ. ಆನೆಗಳ ದಾಳಿಯಿಂದ ಬೆಳೆ ಹಾಗೂ ಆಸ್ತಿ ನಷ್ಟವಾಗುವುದರ ಜೊತೆಗೆ ರೈತರ ಜೀವಕ್ಕೂ ಅಪಾಯ ಎದುರಾಗಿದೆ. ಪರಿಹಾರದ ಭರವಸೆ ನೀಡುವುದಕ್ಕಿಂತ ಮೊದಲು ಆನೆಗಳ ಹಾವಳಿಯನ್ನು ನಿಯಂತ್ರಿಸಿ, ರೈತರ ಕೃಷಿ ಮತ್ತು ಜೀವಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಚಿಕ್ಕಮಗಳೂರು ಜಿಲ್ಲೆಗೆ ಈಗಾಗಲೇ ಕಾಡಾನೆಗಳ ಹಾವಳಿ ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಆನೆಗಳನ್ನು ಸ್ಥಳಾಂತರಿಸಿದರೆ ರೈತರು ಹಾಗೂ ಗ್ರಾಮೀಣ ಜನರ ಬದುಕು ಇನ್ನಷ್ಟು ದುಸ್ತರವಾಗಲಿದೆ. ಆದ್ದರಿಂದ ಸರ್ಕಾರ ಕೂಡಲೇ ಸ್ಥಳಾಂತರದ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಸರ್ಕಾರ ರೈತರ ವಿರೋಧದ ನಡುವೆಯೂ ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಮುಂದಾದರೆ, ರೈತ ಸಂಘದ ವತಿಯಿಂದ ಜಿಲ್ಲೆಯಾದ್ಯಂತ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಮಹೇಶ್, ಚಂದ್ರಶೇಖರ್, ಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ಮುಖಂಡ ಎಚ್.ಎಸ್. ದೇವರಾಜ್ ಹಾಗೂ ಇತರರು ಉಪಸ್ಥಿತರಿದ್ದರು.











