ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಶಿವಶಂಕರ ಸೂಚನೆ

ವಿಜಯ ದರ್ಪಣ ನ್ಯೂಸ್ 

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 06:- ಬ್ರಹ್ಮರಥೋತ್ಸವ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ 2023-24ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಥೋತ್ಸವದಲ್ಲಿ ಹೆಚ್ಚಿನ ಪ್ರಮಾಣದ ಜನರು ಭಾಗವಹಿಸುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು, ಆಂಬ್ಯುಲೆನ್ಸ್ ವ್ಯವಸ್ಥೆ ಜೊತೆಗೆ ವೈದ್ಯಾಧಿಕಾರಿಗಳು ಸಕ್ರಿಯವಾಗಿರಲು ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.

ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಲು ಬೆಸ್ಕಾಂ ಸಿಬ್ಬಂದಿಗಳಿಗೆ ತಿಳಿಸಿದರು. ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗದಂತೆ ಎಚ್ಚರ ವಹಿಸಿ ಎಂದರು. ವಾಹನ ದಟ್ಟಣೆ ಉಂಟಾಗದಂತೆ ಪಾರ್ಕಿಂಗ್ ವ್ಯವಸ್ಥೆ, ಬಸ್ ಗಳ ವ್ಯವಸ್ಥೆ, ಪೋಲಿಸ್ ಸಿಬ್ಬಂದಿಗಳನ್ನು ನೇಮಿಸಲು ತಿಳಿಸಿದರು.

ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಿ, ಸ್ವಚ್ಛತೆ ಕಾಪಾಡಲು ತಿಳಿಸಿದರು. ಸ್ವಸಹಾಯ ಗುಂಪುಗಳ ಮಳಿಗೆಗಳಿಗೆ ವ್ಯವಸ್ಥೆ ಕಲ್ಪಿಸಲು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್ ಅಮರೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ಧಾರ್ಮಿಕ ದತ್ತಿ ತಹಸೀಲ್ದಾರ್ ಜಿ ಜೆ ಹೇಮಾವತಿ, ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ ಪೆಕ್ಟರ್ ಮುನಿಕೃಷ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ

ವಿಜಯ ದರ್ಪಣ ನ್ಯೂಸ್

 ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು  ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 06 :- ಜಿಲ್ಲಾ ಜನತಾ ದರ್ಶನ ಸೇರಿದಂತೆ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಸ್ವೀಕೃತಿಯಾಗಿರುವ ಅರ್ಜಿಗಳಿಗೆ ಮೊದಲ ಆದ್ಯತೆ ನೀಡಿ ಕಾಲ ಮಿತಿಯೊಳಗೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.


ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಜಿಲ್ಲಾ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಕಾಲದಲ್ಲಿ ಬಾಕಿ ಇರುವ ಅರ್ಜಿಗಳನ್ನು ಅವಧಿ ಮೀರದಂತೆ ತ್ವರಿತವಾಗಿ ಬಗೆಹರಿಸಲು ಕ್ರಮವಹಿಸಿ, ಕಾಲಮಿತಿಯೊಳಗೆ ಬಗೆಹರಿಸದೆ ಇದ್ದರೆ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ತಿಳಿಸಿದರು

ಸರ್ಕಾರಿ ಸ್ಮಶಾನ ಜಾಗ ಒತ್ತುವರಿ ಸಮಸ್ಯೆ, ಸಂಪರ್ಕ ರಸ್ತೆ ಸಮಸ್ಯೆಗಳ ಬಗ್ಗೆ ದೂರುಗಳು ಬಂದಲ್ಲಿ ಆದ್ಯತೆ ಮೇರೆಗೆ ಶೀಘ್ರವಾಗಿ ಬಗೆಹರಿಸಲು ತಾಲ್ಲೂಕು ತಹಸೀಲ್ದಾರ್ ಗಳಿಗೆ ಸೂಚನೆ ನೀಡಿದರು.

ಆಶ್ರಯ ಯೋಜನೆಗೆ ಗುರುತಿಸಿರುವ ಸ್ಥಳಗಳನ್ನು ಶೀಘ್ರವಾಗಿ ಸರ್ವೆ ಮಾಡಿಸಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲೆಯ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಂಬಂಧಿಸಿದಂತೆ ವಿಲೇವಾರಿ ಘಟಕಗಳ ಜಮೀನು ಮಂಜೂರಾತಿಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕುವಾರು ಮತ್ತು ಇಲಾಖಾವಾರು ಕೆರೆಗಳ ಮಾಹಿತಿ ಪಡೆದು ಕೆರೆ ಒತ್ತುವರಿ ತೆರವುಗೊಳಿಸಲು ಶೀಘ್ರ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಫ್ರೂಟ್ಸ್’ ತಂತ್ರಾಂಶದಡಿ ನೋಂದಣಿ ಮಾಡಿಸಿ

ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ವಿತರಿಸಲು, ಬೆಂಬಲ ಬೆಲೆ ಯೋಜನೆಯಲ್ಲಿ ಕೃಷಿ ಉತ್ಪನ್ನ ಖರೀದಿಸಲು, ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯಲು, ಕೃಷಿ/ತೋಟಗಾರಿಕೆ/ರೇಷ್ಮೆ ಮತ್ತು ಇತರೆ ಇಲಾಖೆಗಳಲ್ಲಿ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಡಿ ಡಿಸೆಂಬರ್ 11ರೊಳಗೆ ನೋಂದಾಯಿಸಿಕೊಳ್ಳಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಮತದಾರರ ನೋಂದಣಿಗೆ ಕ್ರಮ.

ಚುನಾವಣಾ ಹಿನ್ನೆಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಳಕ್ಕೆ ಮತ್ತು ಪದವೀಧರರ ನೋಂದಣಿಗೆ ಕ್ರಮ ವಹಿಸಿ ಸ್ವೀಪ್ ಸಮಿತಿಯ ಮೂಲಕ ಜಾಗೃತಿ ಮೂಡಿಸಲು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್ , ಅಪರ ಜಿಲ್ಲಾಧಿಕಾರಿ ಹೆಚ್ .ಅಮರೇಶ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಶಿವರಾಜ್, ನೆಲಮಂಗಲ ತಾಲ್ಲೂಕು ತಹಸೀಲ್ದಾರ್ ಅರುಂಧತಿ, ಹೊಸಕೋಟೆ ತಾಲ್ಲೂಕು ತಹಸೀಲ್ದಾರ್ ವಿಜಯ ಕುಮಾರ್, ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.