ಜನ ಸಾಮಾನ್ಯರ ಸಾಮಾನ್ಯರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್
ಎಸ್ ಎಸ್ ಘಾಟಿ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಸೆಂಬರ್ 28 :- ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೇಲಿನಜೂಗಾನಹಳ್ಳಿ (ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಸ್ ಘಾಟಿ ಯಲ್ಲಿ ಹಮ್ಮಿಕೊಂಡಿದ್ದ “ಸಾರ್ವಜನಿಕ ಕುಂದು ಕೊರತೆ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಂದು ಕೊರತೆ ಸಭೆಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಒಂದು ತಿಂಗಳೊಳಗೆ ಪರಿಹರಿಸಲಾಗುವುದು. ಎಸ್.ಎಸ್ ಘಾಟಿ ಕ್ಷೇತ್ರದಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಅನ್ನದಾಸೋಹ ಕ್ಕೆ ಸ್ಥಳ ನಿಗದಿ, ಪಶು ಆಸ್ಪತ್ರೆ ನಿರ್ಮಾಣ ಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ತೂಬಗೆರೆ ಹೋಬಳಿಯಲ್ಲಿನ ರಸ್ತೆ ವ್ಯವಸ್ಥೆ, ಕುಡಿಯುವ ನೀರು, ಬಸ್ ವ್ಯವಸ್ಥೆ, ಹಕ್ಕು ಪತ್ರ ವಿತರಣೆ, ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಸಚಿವರು ಹೇಳಿದರು.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಹಳಷ್ಟು ಪ್ರಸಿದ್ದಿ ಪಡೆದಿದೆ. ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಎಲ್ಲಾ ರೀತಿಯ ನೆರವು ನೀಡಲಾಗುವುದು. ತೂಬಗೆರೆ ಹೋಬಳಿಯು ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಈ ಹೋಬಳಿಯನ್ನು ಕಡೆಗಣಿಸದೇ ಎಲ್ಲಾ ರೀತಿಯ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ಕುಂದು ಕೊರತೆ ಸಭೆ ನಂತರ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ವಿತರಣೆ, ಬಡವರಿಗೆ ನಿವೇಶನ ಹಂಚಿಕೆ, ಹಳ್ಳಿಗಳಲ್ಲಿ ರಸ್ತೆ ದುರಸ್ತಿ, ಸ್ಮಶಾನ ಭೂಮಿ ಕೋರಿಕೆ, ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಶೀಘ್ರ ಇತ್ಯರ್ಥ ಪಡಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
61 ಅರ್ಜಿ ಸ್ವೀಕಾರ
ಗ್ರಾಮಗಳಿಗೆ ರಸ್ತೆ ಸಂಪರ್ಕ, ಜಮೀನು ಸರ್ವೆ, ಸ್ಮಶಾನ ಜಾಗ, ಗೋಮಾಳ ಒತ್ತುವರಿ, ಹಕ್ಕು ಪತ್ರ ಹಂಚಿಕೆ, ಕೆರೆ ಕಟ್ಟೆ ಸಂರಕ್ಷಣೆ, ಪಡಿತರ ಚೀಟಿ ಹಂಚಿಕೆ, ನಿವೇಶನ ಹಂಚಿಕೆ, ಚರಂಡಿ ನಿರ್ಮಾಣ, ಕುಡಿಯುವ ನೀರು, ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಒಟ್ಟು 61 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ.ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗರಾಜ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಹಾಲಿ ಮತ್ತು ಮಾಜಿ ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.