ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್ 

ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ಸಾರ್ವಜನಿಕರಿಗೆ ಬಹುಪಯೋಗಿ ಪಂಚಮಿತ್ರ: ಕೆ.ಹೆಚ್.ಮುನಿಯಪ್ಪ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 03 : ಸಾರ್ವಜನಿಕರಿಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಸುಲಭವಾಗಲು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಪಂಚಮಿತ್ರ ವಾಟ್ಸಾಪ್ ಚಾಟ್ ಆನ್ಲೈನ್ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿದೆ.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪರವರು ಇಂದು ಜಿಲ್ಲಾ ಮಟ್ಟದಲ್ಲಿ ಲೋಕಾರ್ಪಣೆ ಮಾಡಿದರು.

ನಂತರ ಮಾತನಾಡಿದ ಅವರು ಈ ಹಿಂದೆ ಸಾರ್ವಜನಿಕರು ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸಮಸ್ಯೆಗೆ ಹಲವಾರು ವೆಬ್ ಸೈಟ್ ಮತ್ತು ಪೋರ್ಟಲ್ ಗಳಲ್ಲಿ ಭೇಟಿ ನೀಡಬೇಕಾಗಿತ್ತು.

ಅದುದರಿಂದ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, ದೇಶದಲ್ಲೇ ಪ್ರಪ್ರಥಮ ಬಾರಿಗೆ Whatsapp Chat ಅನ್ನು ಅಭಿವೃದ್ಧಿ ಪಡಿಸಿ ಅನುಷ್ಠಾನಗೊಳಿಸಲಾಗಿದೆ.

ಈ ಪೋರ್ಟಲ್ ನಲ್ಲಿ ಚುನಾಯಿತ ಪ್ರತಿನಿಧಿಗಳ ವಿವರಗಳು, ಸಿಬ್ಬಂದಿಗಳ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯತ್‌ಗಳ ಮುಂಬರುವ ಸಭೆಗಳ ಮಾಹಿತಿ
ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು, ಸ್ವ ಸಹಾಯ ಗುಂಪಿನ ವಿವರಗಳು, 4 (1) (a) & 4 (1) (b) RTIನ ವಿವರಗಳು Whatsapp ಮೂಲಕ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್- ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯಬಹುದಾಗಿದೆ. ಅರ್ಜಿಗಳ ಸ್ಥಿತಿಗತಿಯನ್ನು ಸಹ ಪರಿಶೀಲಿಸಬಹುದಾಗಿದೆ.

Whatsapp ಮೂಲಕ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರು, ರಸ್ತೆ ಮತ್ತು ಸೇತುವೆಗಳ ದುರಸ್ತಿ, ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಗೆ ಮತ್ತು ಪಂಚಾಯತ್ ರಾಜ್ ವಿಷಯಗಳಿಗೆ ಸಂಬಂಧಿತ ಈ ಕೆಳಗಿನ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದಾಗಿದೆ ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬಹುದಾಗಿದೆ.