ಕಾರ್ಮಿಕ ಇಲಾಖೆ ದಾಳಿ: ಕಿಶೋರ ಕಾರ್ಮಿಕನೊಬ್ಬನ ರಕ್ಷಣೆ

ವಿಜಯ ದರ್ಪಣ ನ್ಯೂಸ್….. 

ಕಾರ್ಮಿಕ ಇಲಾಖೆ ದಾಳಿ: ಕಿಶೋರ ಕಾರ್ಮಿಕನೊಬ್ಬನ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 01 :- ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು.

ಈ ತಪಾಸಣೆ ವೇಳೆ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕನನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಿದರು.

ಅಲ್ಲದೇ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.

ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದರು.

ಈ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ
ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ‌ಹಾಗೂ ಸೌಮ್ಯ ಹಾಜರಿದ್ದರು.

&&&&&&&&&&&&&&&&&&&&&&&&&

ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 01:- ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿ.ಯು.ಸಿ ಮತ್ತು ಪಿ.ಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ- 1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ & ಎಸ್.ಟಿ 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1.00 ಲಕ್ಷ ರೂ. ಮಿತಿಯಲ್ಲಿ ಇರಬೇಕು.

ವಿದ್ಯಾರ್ಥಿಗಳು https://shp.karnataka.gov.in/bcwd ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20.07.2024. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಸಂಪರ್ಕಿಸಬಹುದೆಂದು ಬೆಂಗಳೂರು ಗ್ರಾಮಾಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.