ಬಾಲ್ಯವಿವಾಹ ನಡೆಯದಂತೆ ಜಾಗೃತಿ ವಹಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…..
ಬಾಲ್ಯವಿವಾಹ ನಡೆಯದಂತೆ ಜಾಗೃತಿ ವಹಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಏಪ್ರಿಲ್, 29 :ಏಪ್ರಿಲ್ 30 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ದಿನವಾಗಿದ್ದು, ಆ ದಿನದಂದು ಬಾಲ್ಯವಿವಾಹಗಳು ಹೆಚ್ಚು ನಡೆಯುವ ಸಾಧ್ಯತೆ ಇರುವುದರಿಂದ, ಅಧಿಕಾರಿಗಳು, ಸಾರ್ವಜನಿಕರು ಜಾಗೃತರಾಗಿರಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರು ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಲಾಗುವುದು.
ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ-2016 ಪ್ರಕಾರ ಬಾಲ್ಯವಿವಾಹಗಳನ್ನು ಏರ್ಪಡಿಸುವ ಪೋಷಕರು ಅಥವಾ ಪಾಲಕರು, 18 ವರ್ಷದೊಳಗಿನ ಹುಡುಗಿಯನ್ನು ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಮದುವೆಯಲ್ಲಿ ಭಾಗವಹಿಸುವ, ಎಲ್ಲಾ ರೀತಿಯಲ್ಲಿ ಸಹಕರಿಸಿದ ಕುಟುಂಬಸ್ಥರನ್ನು ಸಹ ತಪ್ಪಿತಸ್ಥರು ಎಂದು, ಇವರುಗಳಿಗೆ ಮೇಲೆ ತಿಳಿಸಿದ ಕಾಯ್ದೆಯ ಪ್ರಕಾರ ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳ ಕಾಲ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಅಥವಾ ಇವರೆಡರಿಂದಲು ಶಿಕ್ಷೆಗೆ ಒಳಪಡುತ್ತಾರೆ.
ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡಲು ಅವಕಾಶವಿರುತ್ತದೆ. ಅದೇ ರೀತಿ ಇದು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗದೇ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆ.
ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಬರುವ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹದಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕು.
ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.